ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಬರುವ ನವೆಂಬರ್ 13ರಂದು ಕರ್ನಾಟಕಕ್ಕೆ ಅಧಿಕೃತ ಒಂದು ದಿನದ ಭೇಟಿ ನೀಡಲಿದ್ದಾರೆ! ಬೆಂಗಳೂರು ಹಾಗೂ ಮೈಸೂರು ನಗರಗಳಲ್ಲಿ ನಡೆಯಲಿರುವ ವಿವಿಧ ಮೆಗಾ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ರಾಜ್ಯಕ್ಕೆ ಹತ್ತು ಹಲವು ಅಭಿವೃದ್ಧಿ ಯೋಜನೆಗಳ ಕೊಡುಗೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಪ್ರವಾಸದ ವಿವರ ಗಮನಿಸುವುದಾದರೆ; ನವೆಂಬರ್ 13ರ ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ಎಎಲ್ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಪ್ರಶಾಂತಿ ಕುಟೀರಂಗೆ ತೆರಳಲಿದ್ದಾರೆ. ತದನಂತರ ಸಂಸ್ಥೆಯ ಸುವರ್ಣ ಮಹೋತ್ಸವ ಆಚರಣೆಯಲ್ಲಿ ವಿಧ್ಯುಕ್ತವಾಗಿ ಭಾಗಿಯಾಗಲಿದ್ದಾರೆ.
ಇನ್ನು ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ವಾಪಸಾಗುವ ಮೋದಿ, ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಹೊಸ ಮೆಟ್ರೋ ರೈಲು ಸಂಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ವಿಶೇಷವೆಂದರೆ, ಅಲ್ಲಿಂದ ನೇರವಾಗಿ ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸಿ ಐಐಎಂ ಬೆಂಗಳೂರು ಮೆಟ್ರೋ ನಿಲ್ದಾಣದವರೆಗೆ ತೆರಳಲಿದ್ದಾರೆ. ನಂತರ ಐಐಎಂ ಸಭಾಂಗಣದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಕೆಲ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿದ ತಕ್ಷಣ ಹೆಲಿಕಾಪ್ಟರ್ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ಮೋದಿಯವರು ಪ್ರಯಾಣ ಬೆಳೆಸಲಿದ್ದಾರೆ. ಮೈಸೂರಿನಲ್ಲಿ ಕೆ.ಸಿ. ಲೇಔಟ್ ಪಾರ್ಕ್ನಲ್ಲಿ ನಡೆಯುವ ‘ಭಾರತ್ ವನ್’ ಕಾರ್ಯಕ್ರಮ ಹಾಗೂ ಬಹು ನಿರೀಕ್ಷಿತ ‘COSMOS ಮೈಸೂರು’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮೈಸೂರಿನ ಕಾರ್ಯಕ್ರಮಗಳ ಮುಕ್ತಾಯದ ಬಳಿಕ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸಾಗಲಿದ್ದಾರೆ.




