ತುಮಕೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ ಕೋರಾ ಹೋಬಳಿಯ ವಸಂತಪುರ ಕೈಗಾರಿಕಾ ಸಮುಚ್ಚಯದಲ್ಲಿ ಆದರ್ಶ ಸ್ಪೆಷಲಿ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ನೂತನ ಕಾರ್ಖಾನೆಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಿರಿಯೂರಿನಲ್ಲಿ ಜೆಡಿಎಸ್‌ಗೆ ಸೇರಿದ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಒತ್ತಾಯವಿದೆ. ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಪೈಪೋಟಿ ನಡೆದಿದ್ದು, ಕೇವಲ 1,200 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಸೋತಿದ್ದರು. ಈ ಬಾರಿ ಮೈತ್ರಿ ಪಕ್ಷಗಳ ನಡುವೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಎನ್‌ಡಿಎ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಸ್ಟಿಂಗ್ ಆಪರೇಷನ್ ತನಿಖೆಯ ಕುರಿತು ಪ್ರತಿಕ್ರಿಯಿಸಿದ ಅವರು, ತನಿಖೆಯಲ್ಲಿ ಯಾರಿಗೆ ಕ್ಲೀನ್ ಚಿಟ್ ನೀಡಲಾಗುತ್ತದೆ ಎಂಬುದನ್ನು ಕಾದು ನೋಡಬೇಕು. ಕೇರಳದ ಮಹಿಳೆಗೆ ನಾಲ್ಕು ಲಕ್ಷ ರೂಪಾಯಿ ನೀಡಿದ್ದೇಕೆ ಎಂಬುದು ಪೊಲೀಸರ ಪ್ರಶ್ನೆಯಾಗಿದೆ. ಇಡೀ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದರು.
ಮುಖ್ಯಮಂತ್ರಿ ಸ್ಥಾನ ಯಾರಪ್ಪನ ಮನೆಯ ಆಸ್ತಿಯಲ್ಲ ಎಂದು ಹೇಳಿದ ಕುಮಾರಸ್ವಾಮಿ, ತಾವು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮನ್ನಾ ಮಾಡುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಆದ್ಯತೆ ನೀಡಿದ್ದಾಗಿ ತಿಳಿಸಿದರು. ತಮ್ಮ ವಿರುದ್ಧ ಅಸೂಯೆಯ ಆರೋಪ ಮಾಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು. ಮಂಗಳೂರಿನಲ್ಲಿ 32 ಸಾವಿರ ಕೋಟಿ ರೂಪಾಯಿ ಹೂಡಿಕೆ ಘೋಷಿಸಿರುವುದಕ್ಕೆ ಹಣದ ವ್ಯವಸ್ಥೆ ಇದೆಯೇ ಎಂದು ಪ್ರಶ್ನಿಸಿದ ಅವರು, ಮಂಡ್ಯದಲ್ಲಿ ವಿದ್ಯುತ್ ವಾಹನಗಳ ಪರೀಕ್ಷಾ ಕೇಂದ್ರ ಸ್ಥಾಪನೆಗೆ 100 ಎಕರೆ ಜಮೀನು ನೀಡಿರುವುದಾಗಿ ಹೇಳಿ ಜನರಿಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿನ ಭ್ರಷ್ಟಾಚಾರವನ್ನು ಪ್ರಸ್ತಾಪಿಸಿದ ಅವರು, ರಾಮನಗರದಲ್ಲಿ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಉಪತಹಶೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವುದನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರದ ಬೃಹತ್ ಕೈಗಾರಿಕೆ ಇಲಾಖೆಯ ಜವಾಬ್ದಾರಿಗಳ ಬಗ್ಗೆ ಕಾಂಗ್ರೆಸ್ ನಾಯಕರಿಗೆ ತಿಳಿವಳಿಕೆಯಿಲ್ಲ ಎಂದು ಟೀಕಿಸಿದ ಅವರು, ಕೈಗಾರಿಕಾ ನೀತಿ ರೂಪಿಸುವುದು ಮತ್ತು ಉತ್ಪಾದನಾ ಉತ್ತೇಜಕ ಯೋಜನೆಗಳನ್ನು ಜಾರಿಗೊಳಿಸುವುದು ಕೇಂದ್ರದ ಇಲಾಖೆಯ ಕೆಲಸವೆಂದು ಸ್ಪಷ್ಟಪಡಿಸಿದರು. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹೂಡಿಕೆದಾರರಿಗೆ ನೀಡುತ್ತಿರುವ ಸಬ್ಸಿಡಿ ಸೌಲಭ್ಯಗಳನ್ನು ಕರ್ನಾಟಕವೂ ಕಲಿಯಬೇಕು ಎಂದು ಸಲಹೆ ನೀಡಿದರು.




