Hubli News: ಪೊಲೀಸ್ ಠಾಣೆಯ ಎದುರಲ್ಲೇ ಗ್ಯಾಂಗ್ ಗಲಾಟೆ ನಡೆಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಪ್ರಕರಣಕ್ಕೆ ಇದೀಗ ಪೊಲೀಸರ ಖಡಕ್ ಆಕ್ಷನ್ ನಡೆದಿದೆ. ಕಳೆದ ಎರಡು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಬೆಂಡಿಗೇರಿ ಪೊಲೀಸ್ ಠಾಣೆ ಮುಂಭಾಗದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಜಾದವ್ ಸೇರಿದಂತೆ ಸುಮಾರು ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಮುಂಭಾಗದಲ್ಲೇ ನಡೆದ ಗ್ಯಾಂಗ್ ಗಲಾಟೆ… ಹಾಡಹಗಲೇ ನಡೆದ ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಠಾಣೆಯ ಎದುರಲ್ಲೇ ನುಗ್ಗಿ ಗಲಾಟೆ ನಡೆಸಿದ್ದ ದೃಶ್ಯಗಳು ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದವು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಬೆಂಡಿಗೇರಿ ಪೊಲೀಸರು ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಅಭಿಷೇಕ್ ಜಾದವ್ ಹಾಗೂ ಆತನ ತಂಡದ ಸದಸ್ಯರು ಸೇರಿದಂತೆ ಸುಮಾರು ಏಳು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಠಾಣೆಯ ಎದುರಲ್ಲೇ ಗಲಾಟೆ ನಡೆಸಿದವರಿಗೆ ಇದೀಗ ಕಾನೂನಿನ ಬಿಸಿ ತಟ್ಟಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಸಂದೇಶವನ್ನು ಪೊಲೀಸ್ ಇಲಾಖೆ ರವಾನಿಸಿದೆ.




