Hubli News: ಹುಬ್ಬಳ್ಳಿ ನಗರದಲ್ಲಿ ಅಕ್ರಮ ಮದ್ಯ ಸಾಗಾಟ ಜಾಲದ ಮೇಲೆ ಸಿಸಿಬಿ ಪೊಲೀಸರು ಬೆಳ್ಳಂಬೆಳಗ್ಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಗದಗ ರಸ್ತೆಯಲ್ಲಿ ಓಮಿನಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಅಕ್ರಮ ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಫೀಲ್ಡ್ಗೆ ಇಳಿದಿದ್ದಾರೆ. ನಗರದ ಗದಗ ರಸ್ತೆಯಲ್ಲಿ ಓಮಿನಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಅಂದಾಜು ಒಂದು ಲಕ್ಷದಿಂದ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಮದ್ಯ ಸಾಗಾಟಕ್ಕೆ ಬಳಸುತ್ತಿದ್ದ ಓಮಿನಿ ಕಾರನ್ನೂ ಜಪ್ತಿ ಮಾಡಿದ್ದಾರೆ.
ಇನ್ನು ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಪ್ರವೀಣ್ ಬಾಲಕೃಷ್ಣ ಮಿಸ್ಕಿನ್ ಹಾಗೂ ನಾಯಕ ರಾಮಕೃಷ್ಣ ಅವಟೆ ಎಂದು ಗುರುತಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ತಂಡ ಈ ಕಾರ್ಯಾಚರಣೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಮದ್ಯ ಸಾಗಾಟದ ಜಾಲದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಿಸಿಬಿ ಪೊಲೀಸರ ಈ ಕಾರ್ಯಾಚರಣೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬರಾವ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




