Hubli News: ಹುಬ್ಬಳ್ಳಿಯಲ್ಲಿ ಮತ್ತೆ ಡ್ರಗ್ಸ್ ಪೆಡ್ಲರ್ಗಳ ಹಾವಳಿ ಬೆಳಕಿಗೆ ಬಂದಿದೆ. ಉದ್ಯಮ ನಗರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರರಾಜ್ಯದ ಮೂವರು ಪೆಡ್ಲರ್ಗಳನ್ನು ಗೋಕುಲ್ ರೋಡ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 1 ಕೆಜಿ 300 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯ ಉದ್ಯಮ ನಗರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಗೋಕುಲ್ ರೋಡ್ ಠಾಣೆಯ ಪೊಲೀಸರು, ಇನ್ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ದಾಳಿ ನಡೆಸಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ರಘುಕೃಷ್ಣ ರಾಮಸ್ವಾಮಿ, ರಾಜಕುಮಾರ ಹಾಗೂ ಹಳೇ ಹುಬ್ಬಳ್ಳಿಯ ಪ್ರವೀಣ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ.
ಇನ್ನು ಬಂಧಿತರಿಂದ ಬರೋಬ್ಬರಿ 1 ಕೆಜಿ 300 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಜಾಲದ ವಿರುದ್ಧ ಪೊಲೀಸರು ಸಮರ ಸಾರಿದ್ದು, ಅಂತರರಾಜ್ಯ ಪೆಡ್ಲರ್ಗಳ ಬಂಧನದಿಂದ ಡ್ರಗ್ಸ್ ಜಾಲಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ, ಪಿಎಸ್ಐ ಸಚಿನ್ಕುಮಾರ್ ದಾಸರೆಡ್ಡಿ ಸೇರಿದಂತೆ ಸಿಬ್ಬಂದಿಗಳಾದ ಲಕ್ಷ್ಮಣ ನಾಯಕ ಮತ್ತು ಸಂತೋಷ ಅಡೂರ ಭಾಗಿಯಾಗಿದ್ದರು. ಪೊಲೀಸರ ಕಾರ್ಯಾಚರಣೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.




