ಶಿಕ್ಷಕರ ನೇಮಕಾತಿಗೆ ಮಧು ಬಂಗಾರಪ್ಪ ಡೆಡ್‌ಲೈನ್!

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಿ, ಮಾರ್ಚ್–ಏಪ್ರಿಲ್ ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು. ಜೂನ್‌ನಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗುವ ವೇಳೆಗೆ ನೂತನ ಶಿಕ್ಷಕರು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ. ಈ ಮೂಲಕ ಶಿಕ್ಷಕರ ನೇಮಕಾತಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಲ್ಲಿ ಹೊಸ ನಿರೀಕ್ಷೆ ಮೂಡಿದೆ.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ ನಡೆದ ಮಹತ್ವದ ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಶಿಕ್ಷಕರ ನೇಮಕಾತಿ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಲಾಯಿತು. ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಷ್ಮಿ ಮಹೇಶ್ ಅವರಿಗೆ ನೇಮಕಾತಿ ಪ್ರಕ್ರಿಯೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದ್ದಾರೆ. ನೇಮಕಾತಿಯಲ್ಲಿ ಯಾವುದೇ ಅನಗತ್ಯ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಇನ್ನು, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. 2006ರ ಏಪ್ರಿಲ್ 1ಕ್ಕೂ ಮೊದಲು ಅಧಿಸೂಚನೆಗೊಂಡು ನಂತರ ನೇಮಕಾತಿ ಆದೇಶ ಪಡೆದ ಅನುದಾನಿತ ನೌಕರರನ್ನು ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸುವುದು, ಕಾಲ್ಪನಿಕ ವೇತನಕ್ಕೆ ಸಂಬಂಧಿಸಿದ ನ್ಯಾಯಾಲಯದ ಆದೇಶ ಜಾರಿಗೊಳಿಸುವುದು ಹಾಗೂ 2015ರ ನಂತರ ಖಾಲಿಯಾಗಿರುವ ಅನುದಾನಿತ ಶಾಲಾ-ಕಾಲೇಜುಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸದಸ್ಯರು ಪ್ರಸ್ತಾಪಿಸಿದರು. ಜೊತೆಗೆ 1998ರಿಂದ ಖಾಲಿ ಉಳಿದಿರುವ ಅನುದಾನಿತ ಪ್ರಾಥಮಿಕ ಶಾಲೆಗಳ ಹುದ್ದೆಗಳನ್ನು ಭರ್ತಿ ಮಾಡುವಂತೆಯೂ ಮನವಿ ಮಾಡಿದರು.

ಇದರ ಜೊತೆಗೆ ಅನುದಾನಿತ ನೌಕರರಿಗೂ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸುವುದು, ಮಹಿಳಾ ಸಿಬ್ಬಂದಿಗೆ ಋತುಚಕ್ರ ರಜೆ ಕಲ್ಪಿಸುವುದು ಹಾಗೂ ಶಿಕ್ಷಕರಿಗೆ ಬೋಧನೆಯ ಜತೆಗೆ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ದಾಖಲೆ ನಿರ್ವಹಣೆ ಮತ್ತು ಆನ್‌ಲೈನ್ ಮಾಹಿತಿ ಅಪ್‌ಲೋಡ್ ಕೆಲಸದ ಹೊರೆ ಕಡಿಮೆ ಮಾಡುವ ಬಗ್ಗೆಯೂ ಚರ್ಚಿಸಲಾಯಿತು. ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿ, ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ, ದ್ವಿಭಾಷಾ ನೀತಿ ವಿಸ್ತರಣೆ ಹಾಗೂ ಶಿಕ್ಷಕರಿಗೆ ಕಾಲಮಿತಿ ಬಡ್ತಿ ನೀಡುವ ವಿಚಾರಗಳೂ ಸಭೆಯಲ್ಲಿ ಪ್ರಸ್ತಾಪವಾದವು. ಅನುದಾನರಹಿತ ಶಾಲಾ-ಕಾಲೇಜುಗಳ ಶಿಕ್ಷಕರಿಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎ.ಪಿ. ರಂಗನಾಥ್ ಮನವಿ ಮಾಡಿದರು.

ಸಭೆಯಲ್ಲಿ ಪ್ರಸ್ತಾಪವಾದ ಎಲ್ಲ ವಿಚಾರಗಳಿಗೂ ಸಚಿವ ಮಧು ಬಂಗಾರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆರೋಗ್ಯ ವಿಮೆ ವಿಚಾರವಾಗಿ ಆರೋಗ್ಯ ಸಚಿವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಇನ್ನು, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಚಿವರ ಕಾರ್ಯವೈಖರಿಯನ್ನು ಶ್ಲಾಘಿಸಿ, ಶಿಕ್ಷಕರ ಸಮಸ್ಯೆಗಳನ್ನು ತ್ವರಿತವಾಗಿ ಆಲಿಸಿ ಸ್ಪಂದಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಒಟ್ಟಿನಲ್ಲಿ, ಸರ್ಕಾರಿ ಶಿಕ್ಷಕರ ನೇಮಕಾತಿಗೆ ಕಾಲಮಿತಿ ನಿಗದಿಪಡಿಸಿರುವುದು ಅಭ್ಯರ್ಥಿಗಳಲ್ಲಿ ನಿರೀಕ್ಷೆ ಮೂಡಿಸಿದ್ದು, ಜೂನ್ ವೇಳೆಗೆ ಹೊಸ ಶಿಕ್ಷಕರು ಶಾಲೆಗಳಿಗೆ ಸೇರುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

About The Author