ಯಲಹಂಕ: ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಅನ್ನದಾತರ ಪ್ರತಿಭಟನೆಗೆ ರಾಷ್ಟ್ರೀಯ ಕಿಸಾನ್ ಸಂಘಟನೆ ಸಾಂಕೇತಿಕವಾಗಿ ಬೆಂಬಲ ಘೋಷಿಸಿದ್ದು, ನೂರಾರು ರೈತರು, ಕಾರ್ಯಕರ್ತರು ದೊಡ್ಡಬಳ್ಳಾಪುರ – ಬೆಂಗಳೂರು – ದೇವನಹಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಡೆಸಿ, ರಸ್ತೆತಡೆ ಮಾಡಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಬೆಂಗಳೂರು, ದೊಡ್ಡಬಳ್ಳಾಪುರ, ದೇವನಹಳ್ಳಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತಿದ್ದವು.
ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ರಾಷ್ಟ್ರೀಯ ಕಿಸಾನ್ ಸಂಘಟನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಡಿ.ಎಸ್ ವಿಜಯ್ ಕುಮಾರ್, ಯುವ ಮುಖಂಡ ಪ್ರಶಾಂತ್ ಕುಮಾರ್ ಸೇರಿದಂತೆ ನೂರಾರು ರೈತರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು