ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿ.ಎಂ ಬೊಮ್ಮಾಯಿ ಮಾತುಕಥೆ.

ಬೆಂಗಳೂರು: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು.

ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ. ವರದಿ ಬಂದ ತಕ್ಷಣವೇ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಇಂದಿನಿಂದ ರಾಜ್ಯದಲ್ಲಿ ಪಕ್ಷದ ವತಿಯಿಂದ ಜನ ಸ್ವರಾಜ್ ಸಮಾವೇಶವನ್ನು ನಡೆಸುತ್ತಿದ್ದೇವೆ. ಇಂದು ನಾನು ಕೊಪ್ಪಳದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟಿಲ್ ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದೇವೆ ಎಂದು ತಿಳಿಸಿದರು.

ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಒಟ್ಟು ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ವಿಧಾನ ಪರಿಷತ್‍ಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವಂತೆ ಮತದಾರರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ವಿವರಿಸಿದರು.

About The Author