ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕವಾಗಿ ಅನುಷ್ಠಾನಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

2022-23ನೇ ಸಾಲಿನ ಬಜೆಟ್ ಅನುಷ್ಠಾನ, ಆಡಳಿತವನ್ನು ಚುರುಕುಗೊಳಿಸುವುದು, ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತಂತೆ ಚರ್ಚಿಸಲು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಬಜೆಟ್ ನಲ್ಲಿನ ಕಾರ್ಯಕ್ರಮಗಳ ಶೀಘ್ರ ಅನುಷ್ಠಾನ, ಯೋಜನೆಗಳ ಜಾರಿಗೆ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಬಗ್ಗೆ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ರೈತರಿಗೆ, ಎಸ್ ಸಿ ಎಸ್ ಟಿ ,ಓಬಿಸಿ ಸೇರಿದಂತೆ ಜನರಿಗೆ ನೇರವಾಗಿ ಡಿಬಿಟಿ ಮೂಲಕ ಆರ್ಥಿಕ ನೆರವು ನೀಡುವ ಕಾರ್ಯಕ್ರಮಗಳನ್ನು ಜೂನ್ ತಿಂಗಳೊಳಗೆ ಪ್ರಾರಂಭಿಸುವ ಸೂಚನೆ ನೀಡಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಕಾರ್ಯಕ್ರಮಗಳು ಮುಟ್ಟಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ ಎಂದರು.

ಬಜೆಟ್ ಕಾರ್ಯಕ್ರಮಗಳಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡುವ ಯೋಜನೆಗಳಿಗೆ ಭೂ ಸ್ವಾಧೀನ, ಟೆಂಡರ್ ಪ್ರಕ್ರಿಯೆಗಳು ಶೀಘ್ರದಲ್ಲಿ ಮುಗಿಸಬೇಕು. ಆಡಳಿತಕ್ಕೆ ವೇಗ ತಂದು, ದಕ್ಷತೆಯಿಂದ ಕೆಲಸಗಳಾಗಬೇಕು. ಜನಸಾಮಾನ್ಯರಿಗೆ ಸರ್ಕಾರದ ಕಾರ್ಯಕ್ರಮಗಳ ಲಾಭವಾಗಬೇಕು ಎನ್ನುವ ಉದ್ದೇಶದಿಂದ ಇಂದಿನ ಸಭೆಯನ್ನು ನಡೆಸಲಾಗಿದೆ ಎಂದರು.

ನಿರ್ಣಯ ತೆಗೆದುಕೊಳ್ಳುವ ಹಂತಗಳನ್ನು ಕಡಿಮೆ ಮಾಡುವುದು, ಆಡಳಿತಾತ್ಮಕ ಪ್ರಕ್ರಿಯೆಗೆ ಹೊಸ ಚಾಲನೆ ನೀಡುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಸಮಿತಿ ತಿಳಿಸಿರುವಂತೆ ಅನುಷ್ಠಾನ ಮಾಡಲು ಸೂಚನೆ ನೀಡಲಾಗಿದೆ ಎಂದರು.

About The Author