ಬೆಂಗಳೂರು: ಜೂನ್.3ರಂದು ನಡೆಯಲಿರುವಂತ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಿಲ್ಲ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾದ್ರೂ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ನಡುವೆ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣಿರೆರಚಿದೆ ಎನ್ನಲಾಗಿದೆ.
ವಿಧಾನ ಪರಿಷತ್ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ವಿಜಯೇಂದ್ರ ಹೆಸರು ಶಿಫಾರಸು ಮಾಡಲಾಗಿತ್ತು. ಸಂಸದೀಯ ಮಂಡಳಿಯಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಸಮಾಲೋಚನೆ ಮಾಡಲಾಗಿತ್ತು. ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಿತ್ತು. ಈ ವೇಳೆ ವಿಜಯೇಂದ್ರಗೆ ಟಿಕೆಟ್ ಕೊಡುವುದಕ್ಕೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು.
ಮುಂದಿನ ವಿಧಾನಸಭೆ ಚುನಾವಣೆ ಹಾಗೂ ಬಿಎಸ್ವೈ ಪ್ರಚಾರ ಗಮನದಲ್ಲಿ ಇಟ್ಟುಕೊಂಡು ವಿಜಯೇಂದ್ರಗೆ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಆದರೆ ವಿಜಯೇಂದ್ರಗೆ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡಿದಂತಾಗಲಿದೆ. ಇದನ್ನೇ ಕಾಂಗ್ರೆಸ್ ಅಸ್ತ್ರವನ್ನಾಗಿ ಬಳಸಿಕೊಳ್ಳಲಿದೆ. ಬೇಕಾದರೆ ಮುಂದಿನ ವಿಧಾನಸಭೆಗೆ ಟಿಕೆಟ್ ಕೊಡೋಣ ಪಕ್ಷಕ್ಕೆ ಲಾಭವಾಗಲಿದೆ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗುತ್ತಿದೆ.



