ಬೆಂಗಳೂರು : ಸನ್ಮಾನ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಅವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ ನಿರ್ಮಾಣ, ಕೃಷಿ ಯಂತ್ರೋಪಕರಣ ಪೂರೈಕೆ, ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು, ವಿಜ್ಞಾನ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ತಮ್ಮ ಜ್ಞಾನದಿಂದ ರಾಜ್ಯಸಭೆಯಲ್ಲಿನ ಚರ್ಚೆಗಳನ್ನು ಮತ್ತೊಂದು ಎತ್ತರಕ್ಕೆ ಒಯ್ಯಲಿದ್ದಾರೆ ಎಂದು ತಿಳಿಸಿದರು.
ಕೆರೂರಿನ ಘಟನೆ – ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ
ಕೆರೂರಿನ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿ, ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಆರೋಪಿಗಳ ಬಂಧನವನ್ನು ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸೇರಿಸಿದ್ದಾರೆ. ಎರಡೂ ಪಂಗಡಗಳ ನಡುವೆ ಶಾಂತಿಯನ್ನು ಕಾಪಾಡುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರದೇಶದಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು…




