ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ಯಡಿಯೂರಪ್ಪ ಅವರಿಗೆ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ.
ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯನ್ನು ಪುನರ್ ಪರಿಶೀಲನೆ ಮಾಡಲಿಗ್ದದು, 11 ಸದಸ್ಯರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೂ ಟಾಪ್ 5 ಸ್ಥಾನವನ್ನು ನೀಡಲಾಗಿದೆ.
ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅಧಿಕೃತ ಆದೇಶ ಹೊರಡಿಸಿದ್ದು, ಯಡಿಯೂರಪ್ಪ ಹಿರಿತನವನ್ನು ಪರಿಗಣಿಸಿ, ರಾಷ್ಟ್ರಮಟ್ಟದ ಜವಾಬ್ದಾರಿಯನ್ನು ನೀಡಿದೆ. ಈ ಸಮಿತಿಯಲ್ಲಿ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಷಾ, ಬಿಎಸ್ ಯಡಿಯೂರಪ್ಪ ಸೇರಿ 11 ನಾಯಕರಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಶುಭ ಕೋರಿ ಸಿಹಿ ತಿನ್ನಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ, ಸಚಿವರಾದ ಗೋವಿಂದ ಕಾರಜೋಳ, ಕೆ. ಗೋಪಾಲಯ್ಯ, ಸಂಸದ ಲೆಹರಸಿಂಗ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮತ್ತು ಇತರರು ಉಪಸ್ಥಿತರಿದ್ದರು.