ರಾಜ್ಯ ಸರ್ಕಾರದಿಂದ ಗಣೇಶ ಚತುರ್ಥಿ ಆಚರಣೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಪದ್ದತಿ ಜಾರಿಗೊಳಿಸಿ ಆದೇಶ

ಬೆಂಗಳೂರು:ರಾಜ್ಯ ಸರ್ಕಾರದಿಂದ ಬಿಬಿಎಂಪಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ಪಡೆಯಲು ವ್ಯವಸ್ಥೆ ಜಾರಿಗೊಳಿಸಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮ ಆಯೋಜಿಸುವ ಸಂಬಂಧ, ಬಿಬಿಎಂಪಿ, ನಗರ ಸ್ಥಳೀಯ ಸಂಸ್ಥೆಗಳು, ವಿದ್ಯುತ್ ಇಲಾಖೆ, ಪೊಲೀಸ್ ಹಾಗೂ ಆಗ್ನಿಶಾಮಕ ಇಲಾಖೆಗಳನ್ನು ಒಳಗೊಂಡಂತೆ ಏಕಗವಾಕ್ಷಿ ಕೇಂದ್ರಗಳ ಮೂಲಕ ಪೂರ್ವಾನುಮತಿ ಪಡೆಯಲು ಅವಕಾಶ ಕಲ್ಪಿಸಿ ಆದೇಶಿಸಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಪದ್ದತಿ ಜಾರಿಗೊಳಿಸಲಾಗಿದೆ. ಸದರಿ ಏಕಗವಾಕ್ಷಿ ಕೇಂದ್ರಗಳಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಒದಗಿಸಿ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ.

ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳವನ್ನು ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಅನುಮತಿ ನೀಡುವ ಕುರಿತಂತೆ ಯಾವುದೇ ರೀತಿಯ ನ್ಯೂನ್ಯತೆಗಳಾಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

About The Author