ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ ದಾಳಿ ನಡೆಸುತ್ತಿರುವ ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ .
ಕೋಲಾರ ನಗರದ ಸಾರಿಗೆ ಬಸ್ ನಿಲ್ದಾಣದ ವೃತ್ತದಲ್ಲಿ ಕರವೇ ಜಿಲ್ಲಾದ್ಯಕ್ಷ ಮೇಡಿಹಾಳ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ಯರು, ಎಂಇಎಸ್ ಮುಖಂಡರಾದ ಉದ್ಭವ್ ಠಾಕ್ರೆ,ರಾಜ್ ಠಾಕ್ರೆ ಮತ್ತು ಏಕನಾಥ ಶಿಂದೆ ಅವರ ಭಾವಚಿತ್ರವನ್ನು ದಹಿಸುವ ಮೂಲಕ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಡಿಸಿ ವೆಂಕಟರಾಜಾ ಅವರಿಗೆ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ, ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಕರ್ನಾಟಕ ಅನೇಕ ಕನ್ನಡದ ಪ್ರದೇಶಗಳನ್ನು ಕಳೆದುಕೊಂಡರೂ ರಾಷ್ಟ್ರೀಯ ಐಕ್ಯತೆಗೆ ಭಂಗ ಬಾರದೆಂದು ಆದ ಅನ್ಯಾಯವನ್ನು ಸಹಿಸಿಕೊಂಡು ಬಂದಿದೆ, ಆದರೆ ಅಪ್ಪಟ ಕನ್ನಡದ ನೆಲವಾದ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ದಶಕಗಳಿಂದ ತಗಾದೆ ತೆಗೆಯುತ್ತ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.
ಮಹಾರಾಷ್ಟ್ರದ ಒತ್ತಡದಿಂದಲೇ ಕೇಂದ್ರ ಸರ್ಕಾರದಿಂದ ರಚಿಸಲ್ಪಟ್ಟ ಮೆಹರ್ ಚಂದ್ ಮಹಾಜನ್ ಅವರ ಏಕಸದಸ್ಯ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂದು ತೀರ್ಪು ನೀಡಿದೆ. ಆದರೆ ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ರಾಜಕಾರಣಿಗಳು ದಶಕಗಳಿಂದ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಸಂಘರ್ಷದ ವಾತಾವರಣವನ್ನು ನಿರ್ಮಿಸಲು ಯತ್ನಿಸುತ್ತಿದ್ದಾರೆ, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕೆಲ ಭಾಷಾಂಧ ಗೂಂಡಾ ಸಂಘಟನೆಗೆ ಹಣಕಾಸಿನ ಬೆಂಬಲ ನೀಡಿ ಗಡಿಭಾಗದಲ್ಲಿ ದಾಂಧಲೆ ನಡೆಸಲು, ಕನ್ನಡಿಗರ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.
ನೇಪಾಳದ ಪಶುಪತಿನಾಥ ದೇವಸ್ಥಾನದ ಸ್ವಾರಸ್ಯಕರ ಸಂಗತಿ..
ಬೆಳಗಾವಿ ವಿವಾದ ಈಗ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದೆ. ಇಂಥ ಸಂದರ್ಭದಲ್ಲಿ ಈ ನೆಲದ ಕಾನೂನಿಗೆ ಗೌರವ ನೀಡಿ, ತೀರ್ಪಿಗಾಗಿ ಕಾಯುವ ಬದಲು ಬೆಳಗಾವಿಯಲ್ಲಿ ಸಂಘರ್ಷ ಮೂಡಿಸಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಮೊದಲಿನಿಂದಲೂ ಹೋರಾಡುತ್ತ ಬಂದಿದ್ದು, ಬೆಳಗಾವಿಯಲ್ಲಿ ಶಾಂತಿಸ್ಥಾಪನೆ ದೃಷ್ಟಿಯಿಂದ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂಬ ಒತ್ತಾಯವನ್ನು ಮಂಡಿಸುತ್ತ ಬಂದಿದೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ. ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ಕನ್ನಡಿಗರು ಕಟ್ಟಿದ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ವಿಧ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ. ಕನ್ನಡಿಗರ ಮೇಲಿನ ದಾಳಿ-ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಹೇಯಕೃತ್ಯಗಳಾಗಿರುತ್ತವೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದ ಬಹುತೇಕ ಎಲ್ಲ ರಾಜಕೀಯ ಪಕ್ಷಗಳೂ ಕನ್ನಡಿಗರ ವಿರುದ್ಧ ನಡೆಯುತ್ತಿರುವ ದಾಳಿಗಳಿಗೆ ಪ್ರಚೋದನೆ ನೀಡುತ್ತಿವೆ. ಶಿವಸೇನೆಯ ಎರಡೂ ಬಣಗಳು ಮತ್ತು ಎನ್ ಸಿಪಿ, ಎಂ.ಎನ್.ಎಸ್ ಪಕ್ಷಗಳು ವಿಶೇಷವಾಗಿ ಈ ಕುಕೃತ್ಯಗಳಲ್ಲಿ ನೇರವಾಗಿ ಶಾಮೀಲಾಗಿವೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕನ್ನಡಿಗರ ರಕ್ಷಣೆಗೆ ಮಾನ್ಯ ಮುಖ್ಯಮಂತ್ರಿಗಳು ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಬೇಕು, ಈ ಕುರಿತು ಪ್ರಧಾನ ಮಂತ್ರಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಬೇಕಿದ್ದು ತಡಮಾಡದೇ ಬೆಳಗಾವಿಯಲ್ಲಿ ಶಾಂತಿ ಕದಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಕೂಡಲೇ ನಿಷೇಧಿಸಿ, ಅದರ ಮುಖಂಡರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ಒತ್ತಾಯಿಸಿದ್ದಾರೆ.