ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಕಾರ್ಯಕ್ರಮದಲ್ಲಿ ಭಾಗಯಾಗಲಿದ್ದಾರೆಂದು ತಿಳಿಸಿದರು.
ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ..
ಕೇಂದ್ರ- ರಾಜ್ಯ ಸರಕಾರಗಳ ಸಾಧನೆ, ಕೊಡುಗೆ, ಕಾರ್ಯಕ್ರಮಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುವುದು. 2 ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ, ಅವರ ಮನೆಮನೆಗೆ ತೆರಳಿ ಕರಪತ್ರ ಹಂಚಲಿದ್ದೇವೆ. ಫಲಾನುಭವಿಗಳನ್ನು ಮಾತನಾಡಿಸಿ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕಿಸಲಿದ್ದೇವೆ. ಬಿಜೆಪಿ ಸರಕಾರಗಳ ಯೋಜನೆಗಳಿಂದ ಕುಟುಂಬಗಳ ಸಬಲೀಕರಣ ಆಗಿರುವುದರ ಬಗ್ಗೆಯೂ ತಿಳಿಸಲಿದ್ದೇವೆ ಎಂದು ಹೇಳಿದರು.