Hassan News: ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಅತೀ ಶೀಘ್ರವಾಗಿ ಸಹಾಯವಾಣಿ ತೆರೆದು, ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಇಂದು ಸಂಸದ ಶ್ರೇಯಸ್ ಎಂ. ಪಟೇಲ್ ಹೇಳಿದ್ದಾರೆ..
ಡೆಂಗ್ಯೂ ಹೆಚ್ಚಾದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡೆಂಗ್ಯೂ ನಿಂದಾ ಯಾವುದೇ ಸಾವು ಸಂಭವಿಸಬಾರದು, ಜಿಲ್ಲಾಸ್ಪತ್ರೆಯಲ್ಲಿ ಇರುವ ಸೌಲಭ್ಯಗಳನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಡೆಂಗ್ಯೂ ಪರೀಕ್ಷೆ ಹಾಗೂ ಚಿಕಿತ್ಸೆಗೆ ಅಗತ್ಯ ಇರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಬಿದ್ದರೆ ಶೀಘ್ರವಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಡೆಂಗ್ಯೂ ನಿಂದಾ ಇಬ್ಬರು ಸಾವನ್ನಪ್ಪಿರುವುದು ಬೇಸರದ ಸಂಗತಿ, ಮುಂದಿನ ದಿನಗಳಲ್ಲಿ ಡೆಂಗ್ಯೂ ನಿಂದಾ ಸಾವು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು, ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇದ್ದಲ್ಲಿ ಇಲಾಖೆಯಿಂದ ಮಾಹಿತಿ ಪಡೆದು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ಈಗಾಗಲೇ ಸರಕಾರ 300 ರೂಪಾಯಿಗಳ ಸಹಾಯಧನ ನಿಗದಿ ಮಾಡಿದ್ದು, ಮನಬಂದಂತೆ ಹಣ ವಸೂಲಿ ಮಾಡುವ ಪ್ರಕರಣಗಳು ಕಂಡು ಬಂದರೆ ಅಂಥವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಸರ್ಕಾರದ ನಿಯಮಾನುಸಾರ ಶುಲ್ಕ ಪಡೆಯಬೇಕು, ಜೊತೆಗೆ ವಿಮಾ ಯೋಜನೆಗಳನ್ನು ಅಳವಡಿಸಬಹುದಾದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಅವುಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ಸಾರ್ವಜನಿಕರು ಕೂಡ ಡೆಂಗ್ಯೂ ನಿಯಂತ್ರಣಕ್ಕೆ ಸಹಕಾರ ನೀಡಬೇಕು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಿ ಜ್ವರ, ಹಾಗೂ ಶೀತ ದಂತಹ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು..
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಸ್ವಾಮಿ, ಹಾಸನ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ. ಎಸ್.ವಿ ಸಂತೋಷ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಲೋಕೇಶ್, ಇತರರು ಇದ್ದರು.