ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಮುಡಾ ಹಗರಣದ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಡಾ ಸಂಕಷ್ಟದ ಮಧ್ಯೆ ಇದೀಗ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಐದರಿಂದ ಆರು ಸಚಿವರಿಗೆ ಕ್ಯಾಬಿನೆಟ್ನಿಂದ ಕೊಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಶುಕ್ರವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಪುನಾರಚನೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಕೆಲ ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆಯೂ ವರಿಷ್ಠರ ಜೊತೆ ಚರ್ಚೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಎರಡು ತಿಂಗಳಲ್ಲಿ ಸಂಪುಟದ ಐದಾರು ಸಚಿವರಿಗೆ ಕೊಕ್ ನೀಡಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಹೈಕಮಾಂಡ್ ನಾಯಕರ ಭೇಟಿ ವೇಳೆ ಸಂಪುಟದ ಕೆಲ ಸಚಿವರ ಕಾರ್ಯವೈಖರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ಅಲ್ಲದೆ, 5 ರಿಂದ 6 ಸಚಿವರನ್ನು ಕ್ಯಾಬಿನೆಟ್ನಿಂದ ಕೈಬಿಡುವ ಕುರಿತು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.
ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ಬಳಿಕ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಎಂದು ಹೇಳಲಾಗ್ತಿದೆ. ಸದ್ಯ ದೆಹಲಿ ನಾಯಕರು ಎರಡು ರಾಜ್ಯಗಳ ಚುನಾವಣೆಯಲ್ಲಿ ಬ್ಯುಸಿಯಾಗಿದ್ದು, ಎಲೆಕ್ಷನ್ ಮುಗಿದ ಬಳಿಕ ಸಂಪುಟ ಪುನಾರಚನೆ ಬಗ್ಗೆ ಗಮನ ಹರಿಸಲಿದ್ದಾರೆ. ಈ ನಡುವೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಹಿರಿಯ ಶಾಸಕರು ಮಂತ್ರಿಗಿರಿಗಾಗಿ ಇನ್ನಿಲ್ಲದಂತೆ ಲಾಬಿ ನಡೆಸುತ್ತಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಾಯಕರನ್ನ ಸಂಪರ್ಕಿಸಿರುವ ಕೆಲ ಹಿರಿಯ ಶಾಸಕರು ತಮಗೆ ಸಚಿವ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಐದಾರು ಸಚಿವರನ್ನ ಸಂಪುಟದಿಂದ ಕೈ ಬಿಟ್ಟು ಹಿರಿಯ ಕಾಂಗ್ರೆಸ್ ಶಾಸಕರಿಗೆ ಮಣಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯಚಿಂತನೆ ನಡೆಸಿದ್ದಾರೆ. ಹೈಕಮಾಂಡ್ ನಾಯಕರ ಭೇಟಿ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚೆ ನಡೆದಿದೆ. ಸಂಪುಟ ಪುನಾರಚನೆ ವೇಳೆಯಲ್ಲೇ ಪಕ್ಷದ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ.