ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್ (MB Patil) ಅವರಿಗೂ ಪ್ರಾಸಿಕ್ಯೂಷನ್ (Prosecution) ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB)ಯಿಂದ ಸಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Tawar Chand Gehlot) ಅವರಿಗೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಮಾಡಲಾಗಿರೋ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ. ನಿಯಮಗಳನ್ನು ಗಾಳಿಗೆ ತೂರಿ ಕಾನೂನು ಬಾಹಿರವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ರಾಜ್ಯಪಾಲರನ್ನು ಭೇಟಿಯಾಗಿ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ.
ಅವ್ಯವಹಾರ ಆರೋಪ ನಿರಾಕರಿಸಿದ ಎಂ.ಬಿ.ಪಾಟೀಲ್
ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಳ್ಳಿಹಾಕಿದ್ದಾರೆ. ನನ್ನ ವಿರುದ್ಧ ನೀಡಿರುವ ದೂರು ತುಂಬಾ ಹಳೆಯದು. ದಿನಾಂಕವನ್ನು ಬದಲಿಸಿ ನನ್ನ ವಿರುದ್ಧ ಈಗ ಮತ್ತೊಂದು ದೂರು ನೀಡಿದ್ದಾರೆ. ಈ ಸಂಬಂಧ ಈ ಹಿಂದೆಯೇ ರಾಜ್ಯಪಾಲರಿಗೆ ಉತ್ತರ ನೀಡಿದ್ದೇನೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ನಾನು ಕೈಗಾರಿಕಾ ಸಚಿವನಾದ ಮೇಲೆ ಯಾವುದೇ ಬದಲಾವಣೆ ಮಾಡಿಲ್ಲ. ಈಗಿರುವ ನಿಯಮಗಳನ್ನು ಈ ಹಿಂದಿನ ಸರ್ಕಾರವೇ ರೂಪಿಸಿತ್ತು. ನಿಯಮದಂತೆ ಕೆಐಎಡಿಬಿ ಮೂಲೆ ನಿವೇಶನ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರು ನೋಟಿಸ್ ನೀಡಿದರೆ ನಾನು ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.
377 ಎಕರೆ ಪ್ರದೇಶದಲ್ಲಿರುವ 193 ನಿವೇಶನಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದರಲ್ಲಿ 43 ನಿವೇಶನಗಳಿಗೆ 96 ಎಕರೆ ಪ್ರದೇಶವನ್ನಷ್ಟೇ ಹಂಚಲಾಗಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ರಾಜ್ಯದ ಹಲವೆಡೆ ಶೇಕಡಾ 25ರಷ್ಟು ಎಕರೆ ಪ್ರದೇಶದ ನಿವೇಶನಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ. ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.