ಚಿತ್ರದುರ್ಗದಲ್ಲಿ ಘನಘೋರ ದುರಂತ ಸಜೀವ ದಹನವಾಗಿದ್ದೆಷ್ಟು ಮಂದಿ..?

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಘನಘೋರ ದುರಂತ ಸಂಭವಿಸಿದ್ದು, 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಡಿಕ್ಕಿಯಾಗಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುರಂತದಲ್ಲಿ ಸುಮಾರು 32 ಪ್ರಯಾಣಿಕರ ಪೈಕಿ, 9ಕ್ಕೂ ಅಧಿಕ ಮಂದಿ ಸುಟ್ಟುಕರಕಲಾಗಿದ್ದಾರೆಂದು, ಪ್ರಾಥಮಿಕ ಮಾಹಿತಿ ಹೇಳ್ತಿದೆ.

ಅಪಘಾತದ ವೇಳೆ ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಬಸ್‌ನ ಹಿಂದೆಯೇ, ದಾಂಡೇಲಿಗೆ ತೆರಳುತ್ತಿದ್ದ ಶಾಲಾ ಬಸ್‌ ಇತ್ತು. ಪರಿಣಾಮ 42 ಶಾಲಾ ಮಕ್ಕಳಿದ್ದ ಸ್ಕೂಲ್‌ ಬಸ್‌ಗೂ ಬೆಂಕಿ ಹೊತ್ತಿಕೊಂಡಿದೆ. ಸೆಡೆನ್‌ ಬ್ರೇಕ್‌ ಹಾಕಿದ ತಕ್ಷಣ ನಿಯಂತ್ರಣ ತಪ್ಪಿದ ಬಸ್‌, ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಚರಂಡಿ ದಾಟಿ ಆ ಕಡೆಗೆ ಹೋಗಿ ನಿಂತಿದೆ. ಅದೃಷ್ಟವಶಾತ್, ಬಸ್ಸಿನಲ್ಲಿದ್ದ 42 ಮಕ್ಕಳಲ್ಲಿ ಒಬ್ಬರಿಗೂ ಯಾವುದೇ ಗಾಯಗಳಾಗಿಲ್ಲ.

ಶಾಲಾ ಬಸ್‌ ಚಾಲಕ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ದುರಂತದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಅವರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸದ್ಯ, ಮೃತದೇಹಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಮೃತಪಟ್ಟ ಪ್ರಯಾಣಿಕರು ಡಿಜಿಟಲ್ ಮೂಲಕ ಟಿಕೆಟ್ ಕಾಯ್ದಿರಿಸಿದ್ದರಿಂದ, ಅವರ ದೂರವಾಣಿ ಸಂಖ್ಯೆಗಳನ್ನು ಬಳಸಿ ಸಂಬಂಧಿಕರನ್ನು ಸಂಪರ್ಕಿಸುವ ಪ್ರಯತ್ನದಲ್ಲಿ, ಪೊಲೀಸ್ ಅಧಿಕಾರಿಗಳು ನಿರತರಾಗಿದ್ದಾರೆ. ಅಪಘಾತಕ್ಕೆ ಕಾರಣವೇನು ಮತ್ತು ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ಇನ್ನು ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ, ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಕಾರ್ಯಾಲಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದೆ.

ಗೊರ್ಲತ್ತು ಕ್ರಾಸ್ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್‌ಗೆ, ಎದುರುಗಡೆಯಿಂದ ಬರುತ್ತಿದ್ದ ಕಂಟೇನರ್ ಲಾರಿ, ಡಿವೈಡರ್‌ ಕ್ರಾಸ್ ಮಾಡಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿ ಉರಿದು 9 ಮಂದಿ ಸಜೀವ ದಹನವಾಗಿದ್ದಾರೆ.

ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ, 29 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

About The Author