Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ.
ಆದರೆ ಸಿ.ಟಿ.ರವಿ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯದೇ ಆಕ್ಷಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಇದೆ. ಏಕೆಂದರೆ, ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು, ಹಿರೇಬಾಗೇವಾಡಿ ಠಾಣೆಗೆ ನುಗ್ಗಿ ದಾಂಧಲೆ ಮಾಡುವ ಸಾಧ್ಯತೆ ಇದೆ. ಹಾಗಾಗಿ ಮುಂಜಾಗೃತೆ ಕ್ರಮವಾಗಿ ಸಿ.ಟಿ.ರವಿ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ.ರವಿ ವಿರುದ್ಧ ಹಲ್ಲೆಗೆ ಯತ್ನಿಸಿದ್ದು, ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ, ಸುವರ್ಣಸೌಧದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸಿ.ಟಿ.ರವಿ ವಿರುದ್ಧ ಪ್ರತಿಕ್ರಿಯಿಸಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗಳಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.