ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ನಟ ದರ್ಶನ್ಗೆ ರಾಜಾತಿಥ್ಯ ನೀಡಿದ ಪ್ರಕರಣ ಸದ್ಯ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದಿಟ್ಟಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ನಟ ದರ್ಶನ್ ಅವರನ್ನು ಶೀಘ್ರವೇ ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬಳ್ಳಾರಿ ಅಥವಾ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಅವರನ್ನು ಶಿಫ್ಟ್ ಮಾಡಲು ಜೈಲಿನ ಅಧಿಕಾರಿಗಳು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇಂದು ಅಥವಾ ನಾಳೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ನಟ ದರ್ಶನ್ ಅವರನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಸಾಧ್ಯತೆಯಿದೆ. ಅಲ್ಲದೆ, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಕೂಡ ಬೇರೆ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.