Friday, November 28, 2025

Latest Posts

ಹಾಸನ ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ

- Advertisement -

ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್‌ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸೋದಾಗಿ, ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಹಾಸನದ ದುರಂತಕ್ಕೆ ಸಿಎಂ, ಡಿಸಿಎಂ ಸೇರಿದಂತೆ, ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಅಂತಾ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

ಇನ್ನು, ಡಿಸಿಎಂ ಡಿ.ಕೆ. ಶಿವಕುಮಾರ್‌ ಟ್ವೀಟ್‌ ಮಾಡಿದ್ದು, ಭೀಕರ ಅಪಘಾತ ಅತ್ಯಂತ ಆಘಾತಕಾರಿಯಾಗಿದ್ದು, ಈ ಘೋರ ದುರ್ಘಟನೆಯ ಬಗ್ಗೆ ಕೇಳಿ ತುಂಬಾ ದುಃಖವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಪೋಸ್ಟ್‌ ಮಾಡಿದ್ದಾರೆ. ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಕೂಡ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ, ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಅಂತಾ ಹೇಳಿದ್ದಾರೆ.

 

 

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಶಾಸಕ ಸ್ವರೂಪ್, ಕೆ.ಆರ್ ಪೇಟೆ ಶಾಸಕ ಹೆಚ್.ಟಿ. ಮಂಜುನಾಥ್, ಸುದ್ದಿ ತಿಳಿಯುತ್ತಿದ್ದಂತೆ ಹಾಸನದ ಹಿಮ್ಸ್‌ ಆಸ್ಪತೆಗೆ ದೌಡಾಯಿಸಿದ್ರು. ಗಾಯಾಳುಗಳ ಆರೋಗ್ಯ ವಿಚಾರಿಸಿ, ಕುಟುಂಬಸ್ಥರನ್ನು ಸಂತೈಸಿದ್ರು. ಬಳಿಕ ಮಾತನಾಡಿರುವ ನಿಖಿಲ್‌, ಕುಟುಂಬಸ್ಥರ ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಂಡು, ಮಾನವೀಯತೆ ದೃಷ್ಟಿಯಿಂದ ಸರ್ಕಾರ ಇನ್ನು ಹೆಚ್ಚಾಗಿ ಪರಿಹಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿದ್ರು.

ಪ್ರಧಾನಿ ನರೇಂದ್ರ ಮೋದಿಯವರು ಕೂಡ, ಸಂತಾಪ ಸೂಚಿಸಿದ್ದಾರೆ. ಘಟನೆ ಕುರಿತು ಟ್ವೀಟ್ ಮಾಡಿರುವ ಮೋದಿ ಕಾರ್ಯಾಲಯ, ತೀವ್ರ ಆಘಾತ ವ್ಯಕ್ತಪಡಿಸಿದೆ. ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಹೃದಯ ಕಿವುಚುವಂತಿದೆ. ಈ ದುರಂತದ ಸಮಯದಲ್ಲಿ ನಾನು ಘಟನೆಯಲ್ಲಿ ಮಡಿದ ಕುಟುಂಬಸ್ಥರು, ಗಾಯಗೊಂಡವರ ಜೊತೆಗಿದ್ದೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ PMNRF ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

 

- Advertisement -

Latest Posts

Don't Miss