ಸಾರ್ವಜನಿಕ/ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದರು. ಈ ಪತ್ರ ಬಾರೀ ವಿವಾದವನ್ನು ಹುಟ್ಟುಹಾಕಿತ್ತು. ಈ ಸಂಬಂಧ ರಾಜ್ಯ ರಾಜಕಾರಣದಲ್ಲಿ ಆರ್ ಎಸ್ಎಸ್ ವಿವಾದ ಚರ್ಚೆ ಜೋರಾಗಿ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅದಲ್ಲದೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೂ ಖರ್ಗೆ ಗುರಿಯಾಗಿದ್ದಾರೆ.
ಇನ್ನು ಇದೇ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪನನ್ನು ಲಾತೂರ್ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಾನಪ್ಪ ಅಲಿಯಾಸ್ ದಾನೇಶ್, ಪ್ರಿಯಾಂಕ್ ಖರ್ಗೆ RSS ಬಗ್ಗೆ ಮಾತನಾಡಿದ್ದಕ್ಕೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಕುರಿತು ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸರು ಮತ್ತು ಕಲಬುರಗಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ದಿನೇಶ್ ನನ್ನು ಲಾತೂರ್ ನಲ್ಲಿ ಬಂಧಿಸಿದ್ದು, ಇಂದು ರಾತ್ರಿ ದಿನೇಶನನ್ನು ಸದಾಶಿವನಗರ ಠಾಣೆಗೆ ಕರೆತರುವ ಸಾಧ್ಯತೆಗಳಿವೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ