ಅಹೋರಾತ್ರಿ ಧರಣಿಗೆ ದಾಳಿ : ಶಾಂತ ಹೋರಾಟಕ್ಕೆ ಅಡ್ಡಿ

ಹುಳಿಯಾರು ಪಟ್ಟಣದಲ್ಲಿ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಯುತ್ತಿದ್ದ ಅಹೋರಾತ್ರಿ ಧರಣಿಗೆ ಕಿಡಿಗೇಡಿಗಳು ಅಡ್ಡಿಪಡಿಸಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಶಾಂತವಾಗಿ ಧರಣಿ ನಡೆಸುತ್ತಿದ್ದ ರೈತ ಸಂಘದ ಕಾರ್ಯಕರ್ತರ ಬ್ಯಾನರ್‌ಗಳನ್ನು ಕಿತ್ತು ಹಾಕಿ, ಧರಣಿ ಸ್ಥಳದಲ್ಲಿದ್ದ ಗುಡಾರಕ್ಕೆ ಬೆಂಕಿ ಹಚ್ಚಿರುವುದಾಗಿ ರೈತರು ಆರೋಪಿಸಿದ್ದಾರೆ. ಈ ಘಟನೆಯಿಂದ ಧರಣಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಘಟನೆ ತಿಳಿಯುತ್ತಿದ್ದಂತೆ ಧರಣಿ ನಿರತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದು ರೈತರ ಶಾಂತ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ನಡೆದ ಕೃತ್ಯ ಎಂದು ರೈತ ಸಂಘದ ಮುಖಂಡರು ಆರೋಪಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಧರಣಿ ಸ್ಥಳಕ್ಕೆ ಸಮರ್ಪಕ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ರೈತ ಸಂಘದ ನಾಯಕರು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ರೈತ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ರೈತರ ಹೋರಾಟಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಸಾರ್ವಜನಿಕರಿಂದಲೂ ಆಗ್ರಹ ಕೇಳಿಬರುತ್ತಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author