ಬೆಂಗಳೂರಿನ ವಿಧಾನಸಭೆಯಲ್ಲಿ ಇಂದು ತೀವ್ರ ಗದ್ದಲ ಹಾಗೂ ಕೋಲಾಹಲ ಉಂಟಾಗಿದೆ. ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಎಸ್ ‘ವಾಲ್ಮೀಕಿ ನಿಗಮದ ಹಗರಣದ ಆರೋಪ ಹೊತ್ತು ಜೈಲಿಗೆ ಹೋಗಿ ಬಂದಿರುವ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದಕ್ಕೆ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ನಾಯಕ ಸುನಿಲ್ ಕುಮಾರ್, ಆರ್. ಅಶೋಕ್ ಹಾಗೂ ಅಶ್ವತ್ಥ ನಾರಾಯಣ್ ಅವರು, ನಾಗೇಂದ್ರ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಅಥವಾ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ಇಂತಹ ಸಚಿವರನ್ನು ಸದನದಲ್ಲಿ ಕೂರಿಸಿಕೊಂಡು ಅವರಿಂದ ಉತ್ತರ ಪಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ ಬಿಜೆಪಿ ಸದಸ್ಯರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸಭಾತ್ಯಾಗದ ಎಚ್ಚರಿಕೆ ನೀಡಿದರು. ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಕಲಾಪ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದರು.
ಇದೇ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು. ಹನೂರು ಎನ್ಕೌಂಟರ್ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಒಂದು ಕೋಟಿ ಪರಿಹಾರ ನೀಡಬೇಕು ಹಾಗೂ ಮ್ಯಾಜಿಸ್ಟ್ರೇಟ್ ತನಿಖೆ ಬದಲಿಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ, ಹನೂರು ಗುಂಡಿನ ದಾಳಿ ಪ್ರಕರಣದ ತನಿಖೆ ಈಗಾಗಲೇ ಮ್ಯಾಜಿಸ್ಟ್ರೇಟ್ ಮಟ್ಟದಲ್ಲಿ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಸಚಿವ ನಾಗೇಂದ್ರ ರಾಜೀನಾಮೆ ಹಾಗೂ ಹನೂರು ಗುಂಡಿನ ದಾಳಿ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ನಡೆದ ಮಾತಿನ ಚಕಮಕಿಯಿಂದಾಗಿ ವಿಧಾನಸಭೆಯಲ್ಲಿ ಕೆಲಕಾಲ ಭಾರೀ ಗದ್ದಲದ ವಾತಾವರಣ ಸಹ ನಿರ್ಮಾಣವಾಗಿತ್ತು.




