ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮಾತನಾಡಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯದ ಅಮೃತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ 8:55 ಕ್ಕೆ ಅಗಮಿಸಲಿದ್ದಾರೆ. 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ನಂತರ 12ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾರ್ವಜನಿಕರಿಗೂ ವ್ಯವಸ್ಥೆ ಮಾಡಲಾಗುತ್ತಿದ್ದು, ಎಂಟು ಸಾವಿರ ಆಮಂತ್ರಣ ಪತ್ರಿಕೆ ನೀಡಲಾಗುತ್ತಿದೆ. ಒಂದು ಭಾಗದಿಂದ ಪ್ರವೇಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ನಂತರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿ, ಆಗಸ್ಟ್ 15ರಂದು ನಗರದ ಹಲವೆಡೆ ಸ್ವಾತಂತ್ರ್ಯ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಟ್ರಾಫಿಕ್ ಸಮಸ್ಯೆ ಆಗಬಹುದು. ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.