Bellary News: ಬಳ್ಳಾರಿ ಜಿಲ್ಲೆಯ ಬೇರೆ ಬೇರೆ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ, ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡು ಬಂದ ಹಿನ್ನೆಲೆ, 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. ಅಲ್ಲದೇ, ಗೋದಾಮಿನ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಅವರು ತಿಳಿಸಿದ್ದಾರೆ.
ಸರ್ಕಾರಿ ಅತಿಥಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಅವರು, 5 ದಿನಗಳ ಕಾಲ ಜಿಲ್ಲಾದ್ಯಂತ ಆಹಾರ ಇಲಾಖೆ ಅಧಿಕಾರಿಗಳ ಜೊತೆ, ಆಹಾರ ನಾಗರಿಕ ಸರಬರಾಜು ನಿಗಮದ ಸಗಟು ಗೋದಾಮುಗಳಿಗೆ ಭೇಟಿ ನೀಡಲಾಗಿದ್ದು, ಅದರಲ್ಲಿ 10 ನ್ಯಾಯಬೆಲೆ ಅಂಗಡಿಯಲ್ಲಿ ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಸಿಕ್ಕಿದೆ. ಹೀಗಾಗಿ ಆ ನ್ಯಾಯಬೆಲೆ ಅಂಗಡಿಗಳಿಗೆ ಬೀಗ ಜಡಿದು, ಅಲ್ಲಿನ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.