ರಾಯಚೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಅದ್ಧೂರಿ ಚಾಲನೆ ದೊರೆತಿದೆ. ಸರ್ಕಾರದ ವಿವಿಧ ವೈಫಲ್ಯಗಳು ಹಾಗೂ ಹಗರಣಗಳನ್ನು ಖಂಡಿಸಿ ಸುಮಾರು 175 ಕಿಲೋಮೀಟರ್ಗಳ ಪಾದಯಾತ್ರೆಯನ್ನ ಕೈಗೊಳ್ಳಲಾಗಿದೆ.
ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು ಕಹಳೆ ಊದುವ ಮೂಲಕ ಚಾಲನೆ ನೀಡಿದರು. ರೈತಗೀತೆಯೊಂದಿಗೆ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮ ಆರಂಭವಾಯಿತು.
ಪಾದಯಾತ್ರೆಗೆ ಚಾಲನೆ ನೀಡುವುದಕ್ಕೂ ಮುನ್ನ ಬಿ.ವೈ. ವಿಜಯೇಂದ್ರ ಅವರು ಗುರಗುಂಟಾ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಯಾತ್ರೆ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದರು.
ಈ ಮಹತ್ವದ ಸಮಾವೇಶದ ವೇದಿಕೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ, ಜಗದೀಶ್ ಶೆಟ್ಟರ್, ಸಿ.ಟಿ. ರವಿ, ಗೋವಿಂದ ಕಾರಜೋಳ ಹಾಗೂ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಇನ್ನು ಇದರ ಜೊತೆಗೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಜನಾಕ್ರೋಶಕ್ಕೆ ಮಣಿದು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದರು. ಹತ್ತು ಹಲವು ಹಗರಣಗಳಲ್ಲಿ ಮುಳುಗಿರುವ ಈ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.




