ಪಶ್ಚಿಮ ಬಂಗಾಳದ ಬಳಿಕ ತಮಿಳುನಾಡಿನಲ್ಲಿ ಅಮಿತ್ ಶಾ ಅವರ ಭರ್ಜರಿ ಚುನಾವಣೆಯ ಕಹಳೆ ಮೊಳಗಿದೆ. ಇದುವರೆಗೆ ಅಧಿಕಾರ ಹಿಡಿಯಲು ಸಾಧ್ಯವಾಗದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡನ್ನು ಗೆಲ್ಲಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣೆಗಳಿಗೆ ಮುನ್ನವೇ ಭಾರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ನಂತರ ತಮಿಳುನಾಡಿಗೆ ಭೇಟಿ ನೀಡಿರುವ ಅಮಿತ್ ಶಾ, ಆಡಳಿತರೂಢ DMK ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಕೈಗೊಂಡಿದ್ದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಭಾನುವಾರ ಪುದುಕೋಟೆಯಲ್ಲಿ ನಡೆದ ಸಮಾವೇಶದಲ್ಲಿ ಅಮಿತ್ ಶಾ, ಮಾತನಾಡಿದ್ದಾರೆ. ತಮಿಳುನಾಡಿನಲ್ಲಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಶೇ.20 ಕಮಿಷನ್ ಸರ್ಕಾರ ನಡೆಯುತ್ತಿದೆ ಎಂದು DMK ವಿರುದ್ಧ ಗುಡುಗಿದ ಅವರು, ಉದ್ಯೋಗಕ್ಕಾಗಿ ಲಂಚ, ಅಕ್ರಮ ಹಣ ವರ್ಗಾವಣೆ ಹಾಗೂ ಕಲ್ಲಿದ್ದಲು ಹಗರಣಗಳಲ್ಲಿ ಡಿಎಂಕೆ ನಾಯಕರ ಹೆಸರು ಕೇಳಿಬಂದಿದೆ ಎಂದು ಆರೋಪಗಳ ಸುರಿಮಳೆಯನ್ನೇ ಸುರಿಸಿದರು. ಭ್ರಷ್ಟ ಸಚಿವರಿರುವ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವೇ? ಎಂದು ಪ್ರಶ್ನಿಸಿದ ಅಮಿತ್ ಶಾ, ತಮಿಳುನಾಡಿನ ಆರ್ಥಿಕತೆ ಸಾಲ ಮತ್ತು ಮದ್ಯ ಮಾರಾಟದ ಮೇಲೆಯೇ ಅವಲಂಬಿತವಾಗಿದೆ ಎಂದು ಟೀಕಿಸಿದರು.
ಇದೇ ವೇಳೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ NDA ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದರು. DMK ಕುಟುಂಬ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ ಅಮಿತ್ ಶಾ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ಮುಖ್ಯಮಂತ್ರಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
ವರದಿ : ಲಾವಣ್ಯ ಅನಿಗೋಳ




