ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು,
ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ ನಾಯಕರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಸಭೆಗಳಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತಾಗಿಯೂ ವಿಸ್ತೃತ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ದಾಖಲೆ ಆಡಳಿತ’ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಡಿ.ದೇವರಾಜ ಅರಸು ಮತ್ತು ಸಿದ್ದರಾಮಯ್ಯ ಅವರ ಆಡಳಿತ ಶೈಲಿ ಸಂಪೂರ್ಣ ಭಿನ್ನ. ಇವರಿಬ್ಬರ ಹೋಲಿಕೆ ಸರಿಯಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ, ಸಮಾವೇಶಗಳ ಮೂಲಕ ಸಾಧನೆ ತೋರಿಸುವ ಪ್ರಯತ್ನವನ್ನು ಜನರು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು.
ಈಗಾಗಲೇ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ನಿಶ್ಚಿತವಾಗಿ ದೊಡ್ಡ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ. ಈ ಗೆಲುವನ್ನು ಜನರು ಕಣ್ಣಾರೆ ಕಾಣಲಿದ್ದಾರೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೂ ಎಬಿ–ಜಿ ರಾಮ್ ಜಿ’ ಯೋಜನೆಯಡಿ ಅಳವಡಿಸಿರುವ ವಿನೂತನ ತಂತ್ರಜ್ಞಾನ ಮತ್ತು ಪಾರದರ್ಶಕತೆಯು ಕಾಂಗ್ರೆಸ್ ನಾಯಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂಬ ಕಾರಣದಿಂದಲೇ ಕಾಂಗ್ರೆಸ್ ಈ ಯೋಜನೆಯನ್ನು ವಿರೋಧಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದರು




