ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಸೈಕಲ್ ಜಾಥಾ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಲ್ಲೇಶ್ವರಂನ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳ ಮುಖಂಡರು ಈ ಜಾಥಾದಲ್ಲಿ ಭಾಗಿಯಾಗಿದ್ದರು. ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ ರಾಜ್ಯ ಸರ್ಕಾರ ತೊಲಗಿಸಿ, ಬೇಕೇ ಬೇಕು ನ್ಯಾಯ ಬೇಕು, ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗುತ್ತ ಸೈಕಲ್ ಜಾಥಾ ನಡೆಸಲು ಮುಂದಾದರು. ಬಿಜೆಪಿ ಕಚೇರಿಯಿಂದ ಕೂಗಳತೆ ದೂರ ಸೈಕಲ್ ಜಾಥಾ ಸಾಗುತ್ತಿದ್ದಂತೆ ತಡೆದು ನಿಲ್ಲಿಸಿದ ಪೊಲೀಸರು, ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.
ಈ ಸೈಕಲ್ ಜಾಥಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದಿದ್ದು, ಮಾಜಿ ಡಿಸಿಎಂ ಡಾ. ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಶಾಸಕರು, ಬಿಜೆಪಿ ನಾಯಕರು ಭಾಗವಹಿಸಿದ್ದರು.