ಕೆ.ಆರ್.ಎಸ್ ಜಲಾಶಯ ಮುತ್ತಿಗೆ ಯತ್ನ – ಬಿಜೆಪಿ ನಾಯಕರು ಪೊಲೀಸರ ವಶಕ್ಕೆ!

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಈಗ ರಾಜ್ಯದ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಮೂಡಿಸಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ (CWMA) ಆದೇಶವನ್ನು ಖಂಡಿಸಿ ಕೆ.ಆರ್.ಎಸ್ ಅಣೆಕಟ್ಟೆಯ ಬಳಿ ಬಿಜೆಪಿ ನಾಯಕರು ಉಗ್ರ ಪ್ರತಿಭಟನೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಯಿತು. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಜಲಾಶಯಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ಒಂದು ಹನಿ ನೀರನ್ನೂ ಕೂಡ ಹರಿಸಬಾರದು ಎಂದು ನಾಯಕರು ಆಗ್ರಹಿಸಿದರು.

ಸ್ಥಳದಲ್ಲಿ ಪ್ರತಿಭಟನೆ ಹೆಚ್ಚು ತೀವ್ರಗೊಂಡಂತೆ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೆ.ಆರ್.ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಜಲಾಶಯದ ಕಡೆಗೆ ನುಗ್ಗುತ್ತಿದ್ದ ಪ್ರತಿಭಟನಾಕಾರರನ್ನು ತಡೆದು ತಕ್ಷಣವೇ ವಶಕ್ಕೆ ಪಡೆದರು. ಈ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ಸಿ.ಟಿ. ರವಿ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದರು.

ಸರ್ಕಾರದ ಮೇಲೆ ಒತ್ತಡ ಹೇರಲು ಮತ್ತು ಜನರನ್ನು ಜಾಗೃತಗೊಳಿಸಲು ಈ ಸಾಂಕೇತಿಕ ಹೋರಾಟ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಒಟ್ಟಿನಲ್ಲಿ ಕಾವೇರಿ ವಿಚಾರವಾಗಿ ರಾಜ್ಯದಲ್ಲಿ ರಾಜಕೀಯ ಮತ್ತಷ್ಟು ಕಾವೇರುತ್ತಿದ್ದು, ಮುಂದಿನ ದಿನಗಳಲ್ಲಿ ಯಾವ ರೀತಿಯ ಬೆಳವಣಿಗೆಗಳು ನಡೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ.

About The Author