ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅವರು ಭಾನುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ — ಮಾನವ ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಸಫಾರಿ ನಿರ್ಬಂಧಕ್ಕೆ ಮುಂದಾಗಬೇಕಾಗುತ್ತದೆ ಎಂದು ಸ್ಪಷ್ಟ ಸಂದೇಶ ನೀಡಿದರು.
ಸಂಘರ್ಷ ಹೆಚ್ಚಿರುವ ಪ್ರದೇಶಗಳಲ್ಲಿ ಸಿಬ್ಬಂದಿ ಕೊರತೆಯಿದ್ದರೆ, ಸಫಾರಿಯಲ್ಲಿ ನಿಯೋಜಿಸಿರುವ ಸಿಬ್ಬಂದಿಯನ್ನು ಅಲ್ಲಿ ನೇಮಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಇಲಾಖೆಗಳ ಮಧ್ಯೆ ಟೀಕೆ, ಆರೋಪ, ಹೊಣೆ ತಳ್ಳುವಿಕೆ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಅರಣ್ಯದೊಳಗೆ ಆನೆ ಹಾಗೂ ಹುಲಿಗಳ ಸಂಖ್ಯೆ ಹೆಚ್ಚಾದರೂ ಅರಣ್ಯ ವಿಸ್ತಾರ ವೃದ್ಧಿಯಾಗಿಲ್ಲ. ಲಭ್ಯವಿರುವ ಪ್ರದೇಶದಲ್ಲಿ ಪ್ರಾಣಿಗಳಿಗೆ ಆಹಾರ ದೊರೆಯುವಂತೆ ಕಾರ್ಯಯೋಜನೆ ರೂಪಿಸಬೇಕು ಎಂದು ಹೇಳಿದರು. ಮಾಂಸಾಹಾರಿ ಪ್ರಾಣಿಗಳಿಗೆ ಬೇಟೆಯಾಗುವ ಸಸ್ಯಾಹಾರಿ ಪ್ರಾಣಿಗಳು ಹೆಚ್ಚಲು ಹುಲ್ಲುಗಾವಲು ಪ್ರದೇಶವನ್ನು ಸಮೃದ್ಧಗೊಳಿಸಬೇಕು ಎಂಬ ಸೂಚನೆ ನೀಡಿದರು.
ಇತ್ತೀಚಿನ ಸರಗೂರು ಘಟನೆಯನ್ನು ಉಲ್ಲೇಖಿಸಿದ ಸಚಿವರು — ಹುಲಿ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯ ಮರಣೋತ್ತರ ಪರೀಕ್ಷೆಯನ್ನು ಸ್ಥಳೀಯ ಮಟ್ಟದಲ್ಲೇ ಮಾಡಬಹುದಾಗಿತ್ತು, ಮೈಸೂರಿಗೆ ಕರೆದೊಯ್ದು ಗೊಂದಲ ಸೃಷ್ಟಿಸಬೇಕಾಗಿರಲಿಲ್ಲ ಎಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಮಾನವ-ವನ್ಯಜೀವಿ ಸಂಘರ್ಷದ ಘಟನೆಗಳಲ್ಲಿ ಜಿಲ್ಲಾಡಳಿತ, ಪೊಲೀಸ್, ಅರಣ್ಯ ಹಾಗೂ ಆರೋಗ್ಯ ಇಲಾಖೆ ಒಟ್ಟಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ಮತ್ತು ಪಾರ್ಥಿವ ಶರೀರ ಹಸ್ತಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

