ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ ಏರಿಕೆ ಮಾಡಲ್ಲ ಎಂದು ಹೇಳಿದ್ದಾರೆ.
ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ರಾಜ್ಯದ ಸಮಗ್ರ ಅಭಿವೃದ್ಧಿಗೋಸ್ಕರವೇ ಹೊರತು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಅಲ್ಲ. ಈ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಅನುದಾನ ಮೀಸಲಿರಿಸಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.
ಡೀಸೆಲ್ ಏರಿಕೆ ಬಳಿಕ ಮಾತನಾಡಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ರು. ಬಿಎಂಟಿಸಿ ಬಸ್ ದರಗಳನ್ನು 2014ರಲ್ಲಿ ಮತ್ತು ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿಯ ದರಗಳನ್ನು 2020ರಲ್ಲಿ ಪರಿಷ್ಕರಿಸಲಾಯಿತು. ದರ ಪರಿಷ್ಕರಣೆ ನಂತರ ಡೀಸೆಲ್ ಮತ್ತು ಬಿಡಿಭಾಗಗಳ ಬೆಲೆಗಳು ಏರಿಕೆಯಾಗಿವೆ. ಜತೆಗೆ ಸಿಬ್ಬಂದಿ ವೇತನವೂ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ ಎಂದು ತಿಳಿಸಿದ್ರು.
ಮಂಡಳಿಗಳು ಶೇ.25-30 ರಷ್ಟು ದರ ಹೆಚ್ಚಳವನ್ನು ಬಯಸಬಹುದು. ನಾವು ಆ ಮಟ್ಟಿಗೆ ಪ್ರಯಾಣ ದರವನ್ನು ಹೆಚ್ಚಿಸುವುದಿಲ್ಲ. ಪ್ರಸ್ತಾವನೆ ಕುರಿತು ಕೂಲಂಕಷವಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದರು.
ಬಸ್ ಪ್ರಯಾಣ ದರ ಏರಿಕೆ- CM ಹೇಳಿದ್ದೇನು?
- Advertisement -
- Advertisement -