ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟಿದೆ.
ನವೆಂಬರ್ 19ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿರುವ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದರು. ಬುಧವಾರ ನವದೆಹಲಿಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಪ್ರಮುಖ ಮಸೂದೆಯನ್ನು ಅಂಗೀಕರಿಸಲಾಗಿದೆ.
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮಸೂದೆಯು ಕೇಂದ್ರ ಸಂಪುಟ ಸಭೆಯಲ್ಲಿ ಅಂಗೀಕಾರವಾಗಿದೆ. ನವೆಂಬರ್ 29ರಂದು ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗುತ್ತದೆ. ಅಲ್ಲಿಗೆ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳ ರದ್ದು ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.ಸಂಸತ್ ಅಧಿವೇಶನದಲ್ಲಿ ಕೃಷಿ ಕಾಯ್ದೆ ರದ್ದುಗೊಳಿಸುವ ಬಗ್ಗೆ ಅನುಮೋದನೆ ಸಿಗುವವರೆಗೂ ರೈತರು ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುವ ಆರು ಪ್ರತಿಭಟನಾ ಸ್ಥಳಗಳಲ್ಲಿ ರೈತರ ಹೋರಾಟ ಮುಂದುವರಿಯಲಿದೆ. ಸಂಸತ್ತಿನಲ್ಲಿ ಕಾಯ್ದೆಗಳನ್ನು ಔಪಚಾರಿಕವಾಗಿ ರದ್ದುಗೊಳಿಸುವವರೆಗೆ ತಮ್ಮ ನಿಗದಿತ ಪ್ರತಿಭಟನೆಯು ನಿಲ್ಲುವುದಿಲ್ಲ ಎಂದು ರೈತ ಸಂಘಟನೆಗಳ ಒಕ್ಕೂಟ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ ಎಚ್ಚರಿಕೆ ನೀಡಿದೆ.