Hubli News: ಮುಂದಿನ ವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಬೆನ್ನಲ್ಲೇ, ಅಲ್ಪಸಂಖ್ಯಾತ ಸಮುದಾಯಕ್ಕೆ ನಾಲ್ಕು ಸಚಿವ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಸಚಿವ ಸಂಪುಟ ವಿಸ್ತರಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಾರ ನಡೆಯುವ ಸಾಧ್ಯತೆ ಇದೆ ಎಂದು ಹೇಳಿರುವುದನ್ನು ಉಲ್ಲೇಖಿಸಿದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಈ ಬಾರಿ ನಾಲ್ಕು ಸಚಿವ ಸ್ಥಾನಗಳನ್ನು ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಮಾಡಲಾಗಿದೆ. ಕಳೆದ ಬಾರಿ ಎರಡು ಸಚಿವ ಸ್ಥಾನಗಳನ್ನು ನೀಡಲಾಗಿತ್ತು. ಈ ಬಾರಿ ಹೆಚ್ಚಿನ ಪ್ರಾತಿನಿಧ್ಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಸಚಿವರಾಗುವ ಆಸೆ ಎಲ್ಲ ಶಾಸಕರು ಹಾಗೂ ನಾಯಕರಿಗೂ ಇರುತ್ತದೆ. ಆದರೆ ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬ ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ. ನಮಗೆ ಹೈಕಮಾಂಡ್ ಮೇಲಿನ ಸಂಪೂರ್ಣ ವಿಶ್ವಾಸವಿದ್ದು, ಆಶಾವಾದಿಗಳಾಗಿ ಕಾಯುತ್ತಿದ್ದೇವೆ ಎಂದು ಸಲೀಂ ಅಹ್ಮದ್ ಹೇಳಿದರು.




