ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆಗಸ್ಟ್ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು.
ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಅರ್ಜಿ ಕುರಿತು ಕೆಲಕಾಲ ವಾದವನ್ನು ಆಲಿಸಿದೆ. ಬಳಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಕೇಂದ್ರ ಸರ್ಕಾರ ಜಾತಿ ಗಣತಿ ಪ್ರಾಧಿಕಾರ, ಗಣತಿ ರಿಜಿಸ್ಟ್ರಾರ್ ಸೇರಿ, ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಇನ್ನು, ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಹಾವೇರಿ ಜಿಲ್ಲೆಯ ಹಿರೇಕೆರೂರಿನ ಲಿಂಗರಾಜ ಚಪ್ಪರದಳ್ಳಿ ಕೂಡ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಸರ್ಕಾರದ ಪರ ವಾದ ಮಂಡಿಸಲು ರಾಜ್ಯ ಅಡ್ವೋಕೇಟ್ ಜನರಲ್ ಲಭ್ಯವಿಲ್ಲದ ಕಾರಣ ಪರಿಗಣಿಸಿ, ವಿಚಾರಣೆಯನ್ನು ಸೆಪ್ಟೆಂಬರ್22ಕ್ಕೆ ಮುಂದೂಡಿತು. ಸಮೀಕ್ಷೆ ನಡೆಸುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನೂ, ಸೋಮವಾರದಂದೇ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

