ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ನವೆಂಬರ್ ಕ್ರಾಂತಿ’ ಚರ್ಚೆಗಳು ತೀವ್ರವಾಗಿರುವ ಸಮಯದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಈ ಭೇಟಿಯಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆಯೆಂಬ ಮಾಹಿತಿ ಹೊರಬಿದ್ದಿದೆ.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಐದು ತಿಂಗಳ ಹಿಂದೆ ಹೈಕಮಾಂಡ್ ಸಂಪುಟ ಪುನರ್‌ರಚನೆ ಮಾಡಲು ಸೂಚಿಸಿತ್ತು. ನಾನು ಎರಡೂವರೆ ವರ್ಷ ಪೂರೈಸಿದ ನಂತರ ಮಾಡೋಣ ಎಂದು ಹೇಳಿದ್ದೆ. ಈಗ ಏನು ಸೂಚನೆ ಬರುತ್ತಿದೆಯೋ ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯ ಟೀಕೆಗಳನ್ನು ಪ್ರಶ್ನಿಸಿದ ಅವರು, ಸರ್ಕಾರದಲ್ಲಿ ಹಣವಿಲ್ಲ ಎನ್ನುತ್ತಾರೆ. ಹಾಗಾದರೆ 2000 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಹೇಗೆ ಸಾಧ್ಯ? ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಭಿವೃದ್ಧಿ ನಡೆಯುತ್ತಿದೆ. ಚಿಕ್ಕಬಳ್ಳಾಪುರದಲ್ಲೂ ಇಂದು ಅನೇಕ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಸುಳ್ಳಿನ ಅಪಪ್ರಚಾರ ಮಾತ್ರ ಮಾಡುತ್ತಿದ್ದಾರೆ. ಸುಳ್ಳೇ ಅವರ ಮನೆ ದೇವರು ಎಂದು ತಿರುಗೇಟು ನೀಡಿದರು.
ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಒಂದು ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ವೆಚ್ಚ ಮಾಡಿರುವುದನ್ನು ಸಿದ್ದರಾಮಯ್ಯ ಉಲ್ಲೇಖಿಸಿ, ನಾವು ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಹೇಳಿದರು. ಅಧಿಕಾರ ಹಂಚಿಕೆಯ ಕುರಿತು ಮಾತನಾಡಿದ ಅವರು, ಹೈಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಒಪ್ಪಲೇಬೇಕು ಎಂದು ಸ್ಪಷ್ಟನೆ ನೀಡಿದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ

