Chikkaballapura: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದಲ್ಲಿ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಇಂದು ಶಿಡ್ಲಘಟದಲ್ಲಿ ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಆಗಲಿದೆ. ಶಿಡ್ಲಘಟ್ಟ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿರುವುದು ನಮ್ಮ ಸರ್ಕಾರದ ಅಭಿವೃದ್ಧಿ ಪರ್ವದ ವೇಗವನ್ನು ತೋರಿಸುತ್ತಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ಒಂದು ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣ ಇದುವರೆಗೂ ತೆಗೆದಿಟ್ಟಿರುವುದು ಮಾತ್ರವಲ್ಲದೆ, ಇಷ್ಟೇ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನೂ ನಾವು ನಡೆಸುತ್ತಿದ್ದೇವೆ. ಇದಕ್ಕೆ ಇಂದು ಇಲ್ಲಿ ಉದ್ಘಾಟನೆಗೊಂಡ ಅಭಿವೃದ್ಧಿಯೂ ಸೇರಿದೆ.
ಬಿಜೆಪಿಯವರು ನಮ್ಮ ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. ₹2,000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಗೆ ರಾಜ್ಯದ ಜನ ಅಧಿಕಾರ, ಅವಕಾಶ ಕೊಟ್ಟಾಗ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ಒಂದೇ ಒಂದು ಮನೆಯನ್ನೂ ಇಡೀ ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಬಿಜೆಪಿ ವಿತರಣೆ ಮಾಡಲಿಲ್ಲ. ಈಗ ನಾವು ರಾಜ್ಯದ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು, ಕಲ್ಯಾಣ ಕಾರ್ಯಕ್ರಮಗಳನ್ನು ತಲುಪಿಸುತ್ತಿದ್ದೇವೆ. ಇದನ್ನು ಸಹಿಸದ ಬಿಜೆಪಿ ಸುಳ್ಳು ಆರೋಪಗಳ ಮೇಲೆ ಮತ್ತು ರಾಜ್ಯದ ಜನರನ್ನು ವಿಭಜಿಸುವ ಮೂಲಕ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆಯುವ ಸರ್ಕಾರ ಎಂದು ಹೇಳಿದ್ದೆವು, ಅದರಂತೆ ನಡೆದಿದ್ದೇವೆ. ಸರ್ಕಾರದಲ್ಲಿ ಯಾವುದೇ ಬದಲಾವಣೆ ಮಾಡುವ ಸಂಬಂಧ ನಮ್ಮಲ್ಲಿ ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಹಾಗೂ ಡಿ.ಕೆ.ಶಿವಕುಮಾರ್ ಒಪ್ಪಬೇಕು ಎಂದು ಸಿಎಂ ಇದೇ ವೇಳೆ ಹೇಳಿದರು.
ಹೈಕಮಾಂಡ್ ಅನ್ನು ಐದು ತಿಂಗಳ ಹಿಂದೆ ಭೇಟಿಯಾದಾಗ ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇನೆ ಎಂದು ಸಿಎಂ ಹೇಳಿದರು.

