Chikkodi News: ಚಿಕ್ಕೋಡಿ: ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ರಚನೆಗೆ ನನ್ನ ಮೊದಲ ಆದ್ಯತೆಯಾಗಿದ್ದು, ಮುಂಬರುವ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಕುರಿತು ವಿಶೇಷ ಮನವಿ ಸಲ್ಲಿಸಲಾಗುವುದು” ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದ್ದಾರೆ.
ಚಿಕ್ಕೋಡಿ ನಗರದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ಹಾಗೂ ಪ್ರಮುಖ ಬೇಡಿಕೆಗಳ ಕುರಿತು ಮಾಹಿತಿ ನೀಡಿದರು.ಚಿಕ್ಕೋಡಿ ಭಾಗದ ಮಾಜಿ ಸೈನಿಕರು ಹಾಗೂ ಸೈನಿಕರ ಕುಟುಂಬಗಳ ಅನುಕೂಲಕ್ಕಾಗಿ ಚಿಕ್ಕೋಡಿಗೆ ಮಿಲಿಟರಿ ಕ್ಯಾಂಟೀನ್ ಮಂಜೂರಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಚಿಕ್ಕೋಡಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ನೀಗಿಸಲು ಮತ್ತು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೆಚ್ಚಿನ ವೈದ್ಯರ ನೇಮಕಾತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದರು.
ಕ್ಷೇತ್ರದ ವಿವಿಧೆಡೆ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಆದ್ಯತೆ ನೀಡಲಾಗಿದ್ದು, ತುರ್ತಾಗಿ ಬೋರ್ವೆಲ್ಗಳ ಮೂಲಕ ನೀರು ಪೂರೈಸಲು ಕ್ರಮ ವಹಿಸಲಾಗಿದೆ.
ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಹತ್ವದ ಮಸೂದೆಗಳನ್ನು ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದಿಂದ ವಿಪ್ ಜಾರಿ ಮಾಡಲಾಗಿದ್ದು, ನಾಳೆ ಸಂಸತ್ತಿನ ಕಲಾಪಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ ಕೇಂದ್ರದ ಆಡಳಿತಾರೂಢ ಪಕ್ಷದ ವಿರುದ್ಧ ಕಿಡಿಕಾರಿದ ಅವರು ಕೇಂದ್ರ ಸರ್ಕಾರವು ವಿರೋಧ ಪಕ್ಷದವರನ್ನು ಒಡೆಯುವ ಮತ್ತು ಭಯ ಹುಟ್ಟಿಸುವ ತಂತ್ರಗಾರಿಕೆ ಮಾಡುತ್ತಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಆರೋಪಿಸಿದರು.




