2024ರಲ್ಲಿ ರಾಜ್ಯ ಸರ್ಕಾರ ಸದಾ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದೆ. ಒಂದೆಡೆ ಸರಣಿ ಹಗರಣಗಳು ಮತ್ತೊಂದೆಡೆ ವಿವಾದಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ್ದವು.ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಖುರ್ಚಿ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಅದರಿಂದ ಪಕ್ಷದಲ್ಲಾಗುವ ಸಾಧಕ-ಬಾಧಕಗಳ ಬಗ್ಗೆ ಹೈಕಮಾಂಡ್ ಲೆಕ್ಕಾ ಹಾಕುತ್ತಿದೆ.
ಇತ್ತೀಚೆಗೆ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ಕರ್ನಾಟಕದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಅಧಿಕಾರ ಹಂಚಿಕೆಗೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಬಹಿರಂಗಪಡಿಸುವೆ ಎಂದು ಹೇಳಿದ್ದರು. ನಾನೀಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಈಗ ಮಾತನಾಡುವುದಿಲ್ಲ. ರಾಜ್ಯದ ಹಿತಕ್ಕಾಗಿ ಸಿದ್ದರಾಮಯ್ಯ ಹಾಗೂ ನಾನು ಜತೆಯಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗೆಂದು, ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿದ್ದು ನಿಜ. ಆ ಕುರಿತು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ತಿಳಿಸುವೆ ಎಂದಿದ್ದರು. ಆದರೆ, ಡಿಕೆ ಶಿವಕುಮಾರ್ ಅವರ ಈ ಹೇಳಿಕೆಯನ್ನು ಒಪ್ಪದ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಮಧ್ಯೆ ಯಾವುದೇ ಒಪ್ಪಂದವಾಗಿಲ್ಲ ಎಂದು ಅಲ್ಲಗೆಳೆದರು.
ಹೈಕಮಾಂಡ್ ಮಧ್ಯಸ್ಥಿಕೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಒಪ್ಪಂದ ನಡೆದಿರುವುದೇ ನಿಜವಾಗಿದ್ದರೆ, 2025ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಫಿಕ್ಸ್ ಅಂತಲೇ ಹೇಳಲಾಗುತ್ತಿದೆ.ಇನ್ನು ಸಂಪುಟ ವಿಸ್ತರಣೆಯ ಚರ್ಚೆಗಳು ಭಾರಿ ಸದ್ದು ಮಾಡಿವೆ. ಉಪಚುನಾವಣೆಯ ಬಳಿಕ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ, ಸಿದ್ದರಾಮಯ್ಯನವರು ವಿಧಾನಸಭೆ ಅಧಿವೇಶನಕ್ಕೆ ಮುನ್ನ ಪುನರ್ ರಚನೆ ಮಾಡಿದರೆ, ಒಡೆದ ಮನೆಯಾಗಿರುವ ಬಿಜೆಪಿಗೆ ಪ್ರಬಲ ಅಸ್ತ್ರ ನೀಡಿದಂತಾಗುತ್ತದೆ. ಮಂತ್ರಿಗಳು ಭ್ರಷ್ಟರು ಮತ್ತು ಅಸಮರ್ಥರಾಗಿದ್ದರಿಂದ ಪುನಾರಚನೆ ಅಗತ್ಯವಾಗಿದೆ ಎಂದು ಬಿಜೆಪಿ ಪ್ರತಿಪಾದಿಸುತ್ತದೆ ಎಂದು ಕಾಂಗ್ರೆಸ್ ಹೈಕಮಾಂಡ್ ಸಂಪುಟ ವಿಸ್ತರಣೆಯ ಗೋಜಿಗೆ ಹೋಗಿರಲಿಲ್ಲ.
ಆದರೆ ಇದೀಗ ಸಂಪುಟ ವಿಸ್ತರಣೆಗೆ ಸಮಯ ಹದಗೊಂಡಿದ್ದು, 2025ರ ಆರಂಭದಲ್ಲಿಯೇ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇನ್ನು ವಾಲ್ಮೀಕಿ ನಿಗಮ ಹಗರಣದ ಆರೋಪ ಹೊತ್ತು ಸಚಿವ ಸ್ಥಾನ ಕಳೆದುಕೊಂಡಿರುವ ಬಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ.ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನ ನೇಮಕ ಮಾಡಬೇಕು ಎನ್ನುವ ಚರ್ಚೆಗಳು ನಡೆಯುತ್ತಿವೆ. ಸಿದ್ದರಾಮಯ್ಯನವರ ಆಪ್ತರಾದ ಸಚಿವ ಸತೀಶ್ ಜಾರಕಿಹೊಳಿ, ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ-ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮುಂಚೂಣಿಯಲ್ಲಿದ್ದಾರೆ ಪಕ್ಷದಲ್ಲಿ ಡಿಕೆ ಶಿವಕುಮಾರ್ ಅವರ ಸ್ಥಾನಮಾನಕ್ಕೆ ಸರಿಸಾಟಿಯಾಗಬಲ್ಲ ನಾಯಕರೊಬ್ಬರಿದ್ದಾರೆ, ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಬಹುದು ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆಯಾಗುವವರೆಗೂ ಹೊಸ ಕೆಪಿಸಿಸಿ ಅಧ್ಯಕ್ಷರನ್ನು ಆತುರದಿಂದ ನೇಮಿಸುವ ನಿರೀಕ್ಷೆಯಿಲ್ಲ. ಪಕ್ಷ ಹದಗೆಟ್ಟಾಗ ಶಿವಕುಮಾರ್ ಕಷ್ಟಪಟ್ಟು ಪಕ್ಷ ಸಂಘಟಿಸಿದ್ದಾರೆ ಎಂದು ಹೇಳಿದ್ದಾರೆ.