ಶಾಮನೂರು ಶಿವಶಂಕರಪ್ಪ ಅವರೊಂದಿಗಿನ ಒಡನಾಟ ನೆನೆದ ಸಿಎಂ

Political News: ಮಾಜಿ ಸಚಿವ, ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನರಾಗಿದ್ದು, ಇಂದು ದಾವಣಗೆರೆಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿರು ಸಿಎಂ ಸಿದ್ದರಾಮಯ್ಯನವರು, ಶಿವಶಂಕರಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಬಳಿಕ ವಿಧಾನಸಭೆಯಲ್ಲಿ ಮಾತನಾಡಿರುವ ಅವರು ಶಾಮನೂರು ಜತೆಗಿನ ಒಡನಾಟ ನೆನೆದಿದ್ದಾರೆ. ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ. ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲದ ರಾಜಕೀಯದಲ್ಲಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಿವಶಂಕರಪ್ಪ ಅವರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು, ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದೆ, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದೆ. ನನ್ನ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದೆ, ಅದಕ್ಕೂ ಸಾಕಷ್ಟು ಸಹಕಾರ ನೀಡಿದ್ದರು.

ಶಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರು ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು, ಭಗವಂತ ಅವರೆಲ್ಲರಿಗೂ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

About The Author