Political News: ಉತ್ತರಕನ್ನಡ ಜಿಲ್ಲೆಯ ಪ್ರಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುಸ್ಕೃತೆ ಸುಕ್ರಿ ಬೊಮ್ಮಗೌಡ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಇಂದು ಇವರ ಹುಟ್ಟೂರಿನಲ್ಲಿ ಸುಕ್ರಿ ಬೊಮ್ಮಗೌಡ ಅವರ ಅಂತ್ಯಸಂಸ್ಕಾರ ನಡೆದಿದ್ದು, ಸುಕ್ರಿ ಬೊಮ್ಮಗೌಡ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಈ ಮೂಲಕ ಕರ್ನಾಟಕ ಓರ್ವ ಜಾನಪದ ಹಾಡುಗಾರ್ತಿಯನ್ನು ಕಳೆದುಕೊಂಡಿದೆ. ಇನ್ನು ಹಲವು ಗಣ್ಯರು ಸುಕ್ರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು, ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು.
ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದು:ಖದಲ್ಲಿ ನಾನೂ ಪಾಲ್ಗೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.