ಸಿಎಂ ಸಿದ್ದರಾಮಯ್ಯ ಅವರು, ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ನೀರಾವರಿ ಯೋಜನೆಗಳಿಗೆ 7,000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಘೋಷಿಸಿದರು.
ಹೈದರಾಬಾದ್-ಕರ್ನಾಟಕವನ್ನು ನಿಜಾಮನ ಆಳ್ವಿಕೆಯಿಂದ ವಿಮುಕ್ತಗೊಳಿಸಲು ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಂಡರು. ರಾಜ್ಯದಲ್ಲಿ ಉತ್ತಮ ಮಳೆಯಾದರೂ ಕೆಲವೆಡೆ ಬೆಳೆ ಹಾನಿಯಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ನೇತೃತ್ವದಲ್ಲಿ ಜಂಟಿ ಸಮಿತಿಗೆ ಬೆಳೆ ಹಾನಿ ವರದಿ ತಯಾರಿಸುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ವಿಮಾ ಕಂಪನಿಗಳ ಮೂಲಕ ರೈತರಿಗೆ ಪರಿಹಾರ ವಿತರಿಸಲಾಗುವುದೆಂದೂ ಭರವಸೆ ನೀಡಿದರು.
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ನಿಯಮಾವಳಿಗಳನ್ನು ಪರಿಷ್ಕರಿಸಿ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದರೂ, ಇದುವರೆಗೆ ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲವೆಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಸಾಲಮನ್ನಾ ಬೇಡಿಕೆ ಕುರಿತು ಪ್ರಶ್ನಿಸಿದಾಗ, ಪರಿಶೀಲಿಸಲಾಗುವುದು ಎಂದು ಉತ್ತರಿಸಿದ ಸಿಎಂ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯಲಿದ್ದು, ಇದಕ್ಕಾಗಿ 1.75 ಲಕ್ಷ ಶಿಕ್ಷಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ಧಾರ್ಮಿಕ ಮತಾಂತರ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕ್ರಿಶ್ಚಿಯನ್ನರು, ಮುಸ್ಲಿಮರು ಈ ದೇಶದವರಲ್ಲವೆ? ಎಂದು ಪ್ರಶ್ನಿಸಿದರು.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ



