ರಾಜ್ಯಾದ್ಯಂತ ಶೀತಗಾಳಿ ಪ್ರಹಾರ : ಹವಾಮಾನ ಇಲಾಖೆ ಅಲರ್ಟ್

ರಾಜ್ಯಾದ್ಯಂತ ಮೈನಡುಗುವ ಚಳಿ ಆರಂಭವಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಶೀತಗಾಳಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮೊದಲ ಹಾಗೂ ಎರಡನೇ ದಿನ ತೀವ್ರ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಇದರಿಂದ ಈ ಜಿಲ್ಲೆಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲೂ ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಹೆಚ್ಚಿನ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಬೀದರ್ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ತೀವ್ರ ಶೀತಲ ಅಲೆಯ ವಾತಾವರಣ ಮುಂದುವರಿಯಲಿದ್ದು, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶೀತಲ ಅಲೆಯ ಪ್ರಭಾವ ಕಂಡುಬರುವ ಸಾಧ್ಯತೆ ಇದೆ. ಇತ್ತ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಕಾಶ ಬಹುತೇಕ ಶುಭ್ರವಾಗಿರಲಿದ್ದು, ಕೆಲ ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆ ಹೆಚ್ಚಾಗಿದೆ. ಇಲ್ಲಿ ಗರಿಷ್ಠ ತಾಪಮಾನ ಸುಮಾರು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಕನಿಷ್ಠ ತಾಪಮಾನದಲ್ಲಿ ತಕ್ಷಣದ ದೊಡ್ಡ ಬದಲಾವಣೆ ಇರದಿದ್ದರೂ, ಮುಂದಿನ ಎರಡು ದಿನಗಳ ನಂತರ 2ರಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲೂ ಮುಂದಿನ ಎರಡು ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದಲ್ಲದೆ, ಲಕ್ಷದ್ವೀಪಕ್ಕೆ ಹೊಂದಿಕೊಂಡಿರುವ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಲೋಮೀಟರ್ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಕಂಡುಬಂದಿದೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಕೆಳ ಉಷ್ಣವಲಯದ ಮಟ್ಟದಲ್ಲಿ ಈಶಾನ್ಯದಿಂದ ಆಗ್ನೇಯ ದಿಕ್ಕಿನ ಗಾಳಿಗಳು ಬೀಸುವ ಸಾಧ್ಯತೆ ಇದೆ.

ಶೀತಲ ಅಲೆಯ ಅತಿಯಾದ ಪರಿಣಾಮದಿಂದ ಚರ್ಮ ಹಳದಿ ಬಣ್ಣಕ್ಕೆ ತಿರುಗಿ, ಗಟ್ಟಿಯಾಗುವುದು ಹಾಗೂ ಮರಗಟ್ಟುವಿಕೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಕೆಂಪು ಗುಳ್ಳೆಗಳು ಉಂಟಾಗಬಹುದು. ಈ ಸ್ಥಿತಿ ಗಂಭೀರವಾಗಿದ್ದು, ಗ್ಯಾಂಗ್ರೀನ್‌ಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದ್ದರಿಂದ ಶೀತಲ ಅಲೆಯ ಮೊದಲ ಲಕ್ಷಣಗಳು ಕಾಣಿಸಿದ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ಹಾಗೂ ಅಗತ್ಯವಿದ್ದಷ್ಟು ದೇಹವನ್ನು ಬೆಚ್ಚಗಿಟ್ಟುಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author