Dharwad News: ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ಯಾರಂಟಿಗಳ ಫಲಾನುಭವಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಧಾರವಾಡ ನಗರದ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯನವರ ಹೆಸರಿಗೆ ಕಪ್ಪು ಮಸಿ ಬಳಿಯುವ ಕೆಲಸವನ್ನು ಕೇಂದ್ರ ಬಿಜೆಪಿ ಸರ್ಕಾರ ಮಾಡುತ್ತಿದೆ.
ರಾಜ್ಯದ ಬಿಜೆಪಿ ನಾಯಕರು ಕೂಡ ಮುಡಾ ವಿಚಾರದಲ್ಲಿ ಸಿದ್ದರಾಮಯ್ಯನವರ ಹೆಸರನ್ನು ಉದ್ದೇಶಪೂರ್ವಕವಾಗಿ ಸಿಕ್ಕಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪಗಳನ್ನು ಹೊರಿಸುವ ಕೆಲಸ ಮಾಡುತ್ತಿದೆ.
ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರು ಕೂಡಲೇ ತಮ್ಮ ನಡೆಯಿಂದ ಹಿಂದೆ ಸರಿಯಬೇಕು. ಇಲ್ಲದೇ ಹೋದರೆ ರಾಜ್ಯದಾದ್ಯಂತ ದೊಡ್ಡ ಪ್ರಮಾಣದ ಹೋರಾಟಕ್ಕೆ ಕಾಂಗ್ರೆಸ್ ಮುಂದಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.