Political News: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದು ಕುಳಿತಿದೆ. ಇದೀಗ, ಮೂಡಾ ಹಗರಣದಲ್ಲಿ ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ಮಾಡುವಂತೆ ಕೋರ್ಟ್ ಸೂಚಿಸಿದೆ.
ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಸಿಎಂ ಸಿದ್ದರಾಮಯ್ಯರನ್ನು ಎ1 ಆರೋಪಿ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ, ಪತ್ನಿ ಪಾರ್ವತಿ ಎ2, ಮೈದುನ ಮಲ್ಲಿಕಾರ್ಜುನ್ ಎ3 ಆರೋಪಿ, ಭೂಮಿ ಮಾರಾಟ ಮಾಡಿದ ದೇವರಾಜು ಎ4 ಎಂದು ಎಫ್‌ಐಆರ್ ದಾಖಲಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದ್ದು, ಈ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಕೋರ್ಟ್ ಆದೇಶ ನೀಡಿತ್ತು. ಮೂರು ತಿಂಗಳಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಕೋರ್ಟ್ ಹೇಳಿದ್ದು, ಇದೀಗ ಎಫ್‌ಐಆರ್ ದಾಖಲಿಸಲಾಗಿದೆ.
ಇದೀಗ ಮೈಸೂರಿನಲ್ಲೇ ಪ್‌ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.