Sports News:
ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅದಾದ ಬಳಿಕ ಅವರಿಗೆ ಮತ್ತೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಹೊಸ ಅವಕಾಶಗಳನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಟೀಮ್ ಇಂಡಿಯಾ ಪರ 61 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಮುರಳಿ ವಿಜಯ್ 40 ರ ಸರಾಸರಿಯಲ್ಲಿ 3880 ರನ್ ಗಳಿಸಿದ್ದಾರೆ. ಈ ವೇಳೆ 12 ಶತಕ ಹಾಗೂ 15 ಅರ್ಧಶತಕಗಳನ್ನು ಕೂಡ ಬಾರಿಸಿದ್ದರು. ಅಷ್ಟೇ ಅಲ್ಲದೆ ಭಾರತದ ಪರ 17 ಏಕದಿನ ಹಾಗೂ 9 ಟಿ20 ಪಂದ್ಯಗಳನ್ನು ಆಡಿರುವ ಮುರಳಿ ವಿಜಯ್ ಕ್ರಮವಾಗಿ 339 ರನ್ ಹಾಗೂ 169 ರನ್ ಕಲೆಹಾಕಿದ್ದಾರೆ.