ಈ ವರ್ಷ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗುವ ಹಾಗೇ ಕಾಣುತ್ತಿಲ್ಲ. ಅಬ್ಬಾ! ಮಳೆ ಕಡಿಮೆಯಾಯ್ತು ಎಂದು ಅಂದು ಕೊಳ್ಳುವಷ್ಟರಲ್ಲಿ ಮರುದಿನವೇ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಂಡಮಾರುತ ಪ್ರಭಾವದಿಂದ ಕಳೆದ ಒಂದು ವಾರದಿಂದಲೂ ಧಾರಕಾರ ಮಳೆ ಆಗುತ್ತಿದೆ. ಇದೀಗ ವಾಯುಭಾರ ಕುಸಿತದ ಪ್ರಭಾವದಿಂದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡ ಪರಿಣಾಮ ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಈಶಾನ್ಯ ಅರೇಬಿಯನ್ ಸಮುದ್ರದ ಮೇಲೆ ಬೀಸಿದ ತೀವ್ರ ಚಂಡಮಾರುತ ಪ್ರಭಾವವು ಕಳೆದ 6 ಗಂಟೆಗಳಲ್ಲಿ ಗಂಟೆಗೆ 18 ಕಿ.ಮೀ ವೇಗದಲ್ಲಿ ಪಶ್ಚಿಮಕ್ಕೆ ಚಲಿಸಿದೆ. ಇದು ಅಕ್ಟೋಬರ್ 5 ರ ವೇಳೆಗೆ ಪಶ್ಚಿಮ-ನೈಋತ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದ್ದು, ವಾಯುವ್ಯ ಮತ್ತು ಪಕ್ಕದ ಪಶ್ಚಿಮ ಮಧ್ಯ ಅರೇಬಿಯನ್ ಸಮುದ್ರವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿ ಧಾರಾಕಾರ ಮಳೆ ಆಗಲಿದೆ.
ಅಲ್ಲದೇ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಉಲ್ಲೇಖಿಸಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ