ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಉದ್ದೇಶದಿಂದ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಕಾಲಮಿತಿಯೊಳಗೆ ಜರುಗುತ್ತಿರುವಂತೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ನಿಯಮಿತವಾಗಿ ನಡೆಸುವುದು ಅಗತ್ಯ ಎಂದು ಹೇಳಿದರು.
ರಾಜ್ಯದಲ್ಲಿ 31 ಜಿಲ್ಲೆಗಳ 1,130 ಜಿಪಂ ಕ್ಷೇತ್ರಗಳು ಮತ್ತು 239 ತಾಲೂಕುಗಳ 3,671 ತಾಪಂ ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿ ಇನ್ನೂ ಸಲ್ಲಿಸದಿರುವುದರಿಂದ, ಜಿಪಂ–ತಾಪಂ ಕ್ಷೇತ್ರಗಳ ಪುನರ್ವಿಂಗಡನೆ ಹಾಗೂ ಮೀಸಲಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಅವರು ಆರೋಪಿಸಿದರು.
ಈ ವಿಳಂಬದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೊರೆ ಹೋಗಿದ್ದು, 2023ರಲ್ಲಿ ಸರ್ಕಾರ ಒಂದು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಆದರೆ, ಇದುವರೆಗೆ ಯಾವುದೇ ಸ್ಪಷ್ಟ ಪ್ರಗತಿ ಕಾಣಿಸದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಉದಾಹರಣೆ ಎಂದು ಮಹಾಂತೇಶ ಕವಟಗಿಮಠ ಟೀಕಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಜಾಪ್ರಭುತ್ವದ ಮೂಲವಾಗಿದ್ದು, ಅವುಗಳನ್ನು ನಿರಂತರವಾಗಿ ಮುಂದೂಡುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಗಳಿಗೆ ಕಾಲಮಿತಿಯನ್ನು ನಿಗದಿಪಡಿಸುವಂತೆ ವಿಶೇಷ ಕಾನೂನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ವರದಿ : ಲಾವಣ್ಯ ಅನಿಗೋಳ



